ಸಂಡೂರು/ಬಳ್ಳಾರಿ: ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ಸರ್ಕಾರಗಳು ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಸಂಡೂರು ಪಟ್ಟಣದಲ್ಲಿ ಎತ್ತಿನ ಬಂಡಿ ಜಾಥಾ ನಡೆಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಎಪಿಎಂಸಿ ಆವರಣದಿಂದ ಎತ್ತಿನ ಬಂಡಿಗಳೊಂದಿಗೆ ಆರಂಭವಾದ ಜಾಥಾ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿವರೆಗೆ ಸಾಗಿತು. ಬಳಿಕ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ಕೃಷಿ ಸಾಲ ಮನ್ನಾ, ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಬರಗಾಲದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಮಳೆಯ ಕೊರತೆಯಿಂದ ಬೆಳೆಗಳು ಸಂಪೂರ್ಣ ನಷ್ಟವಾಗಿದ್ದು, ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳು ಬತ್ತಿವೆ. ಅಂತರ್ಜಲ ಮಟ್ಟ ಕುಸಿದಿರುವುದರಿಂದ ರೈತರು ಮತ್ತು ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಮೇವು ಕೊರತೆಯೂ ತೀವ್ರವಾಗಿದ್ದು, ರೈತರ ಬದುಕು ಸಂಕಷ್ಟದಲ್ಲಿದೆ ಎಂದು ಹೇಳಿದರು.

ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ನಷ್ಟದ ಸಮಗ್ರ ಸಮೀಕ್ಷೆ ನಡೆಸಿ ವೈಜ್ಞಾನಿಕ ಆಧಾರದ ಮೇಲೆ ಪರಿಹಾರ ವಿತರಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಬರಪೀಡಿತ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಬಳ್ಳಾರಿ ಜಿಲ್ಲೆಯ ರೈತರ ಸಮಸ್ಯೆಗಳಾದ ನೀರಾವರಿ, ವಿದ್ಯುತ್, ಬೆಳೆ ಪರಿಹಾರ, ಕೃಷಿ ಸಾಲ, ಉದ್ಯೋಗ, ಕುಡಿಯುವ ನೀರು ಹಾಗೂ ಪರಿಸರ ಸಂರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕು. ಸಂಡೂರು ತಾಲೂಕಿನ ಸ್ಥಳೀಯ ರೈತರ ಸಮಸ್ಯೆಗಳಿಗೂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಳಿಕ ತಹಶೀಲ್ದಾರ್ ಜಿ. ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿದ ರೈತರು ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಕೆ. ನಾಯ್ಡು, ತಾಲೂಕು ಅಧ್ಯಕ್ಷ ಚಂದ್ರಶೇಖರ ಮೇಟಿ, ತಾಲೂಕು ಉಪಾಧ್ಯಕ್ಷ ವಿರುಪನಗೌಡ, ಮುಖಂಡರಾದ ಮೌನೇಶ, ನಾಗರಾಜ, ಕಾಡಪ್ಪ, ಷಣ್ಮುಖಪ್ಪ, ತಾವು, ಅಲಿಭಾಷ, ಮಲ್ಲಿಕಾರ್ಜುನ, ಮಹೇಶ, ಸುಭಾನ್, ವೀರೇಶ, ಎಚ್. ಪ್ರವೀಣ್ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor