ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ 7,561 ಮತದಾರರ ಹೆಸರು ಅಳಿಸಲು ಯತ್ನ ಆರೋಪ: ಬಿಜೆಪಿ ಏಜೆಂಟ್ ವಿರುದ್ಧ ಎಫ್‌ಐಆರ್ ದಾಖಲು
ಬಳ್ಳಾರಿ : ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 7,561 ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ತೆಗೆದುಹಾಕಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಬೂತ್ ಮಟ್ಟದ ಏಜೆಂಟ್ (ಬಿಎಲ್‌ಎ) ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಟಿ.ಶ್ರೀನಿವಾಸ್ ಮೋತ್ಕೂರ್ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕ್ಷೇತ್ರದ ಮತದಾರರು ಗೈರುಹಾಜರಾಗಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಅವರು ದೊಡ್ಡ ಪ್ರಮಾಣದಲ್ಲಿ ನಮೂನೆ-7 ಅರ್ಜಿಗಳನ್ನು ಸಲ್ಲಿಸಲು ಮುಂದಾಗಿದ್ದರು. ಆದರೆ, ಅರ್ಜಿಗಳಿಗೆ ಅಗತ್ಯ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವುಗಳನ್ನು ತಿರಸ್ಕರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಹುತೇಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಈ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಗೌತಮ್ ಎಸ್. ಪೊಲೀಸರಿಗೆ ದೂರು ನೀಡಿದ್ದರು.
ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 353ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫಾರ್ಮ್-7 ದುರುಪಯೋಗಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ದಾಖಲಾಗಿರುವ ಆರನೇ ಎಫ್‌ಐಆರ್ ಇದಾಗಿದೆ ಎಂದು ತಿಳಿದುಬಂದಿದೆ.