×
Ad

ಬಳ್ಳಾರಿ | ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ : ಡಿಸಿ ನಾಗೇಂದ್ರ ಪ್ರಸಾದ್ ಕೆ.

Update: 2026-01-13 21:19 IST

ಬಳ್ಳಾರಿ, ಜ. 13: ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸಿ, ಅಪಘಾತ ವಲಯಗಳಲ್ಲಿ ಕಡ್ಡಾಯವಾಗಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಳ್ಳಾರಿ ನಗರದಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡಿರುವುದು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದನ್ನು ಒಂದು ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಯವರು ಎಚ್ಚರಿಸಿದರು.

ನಗರದ ಹೊರಭಾಗದ ಸರ್ವೀಸ್ ರಸ್ತೆಗಳ ದುರಸ್ತಿ ಕಾರ್ಯ ತಕ್ಷಣವೇ ಆಗಬೇಕು. ಗುರುತಿಸಲಾದ ರಸ್ತೆಗಳ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ಆರಂಭಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ವಿವಿಧೆಡೆ ಪೊಲೀಸ್ ಇಲಾಖೆಯ ಬೇಡಿಕೆಯಂತೆ 'ಬಸ್ ಬೇ' ನಿರ್ಮಿಸಲು ಮತ್ತು ಶಾಲೆ-ಆಸ್ಪತ್ರೆಗಳ ಮುಂಭಾಗ ವೇಗಮಿತಿ ಫಲಕಗಳನ್ನು ಅಳವಡಿಸಲು ಸ್ಥಳ ಗುರುತಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದೊಳಗೆ ಭಾರಿ ಗಾತ್ರದ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿದ್ದು, ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಟೋ ಚಾಲಕರು ಮನಬಂದಂತೆ ವಾಹನ ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಈ ಸಂಬಂಧ ಆಟೋ ಚಾಲಕರ ಸಂಘದೊಂದಿಗೆ ಸಭೆ ನಡೆಸಿ, ನಿಗದಿತ ಪಾರ್ಕಿಂಗ್ ಸ್ಥಳಗಳ ಬಗ್ಗೆ ಸ್ಪಷ್ಟ ಸೂಚನೆ ನೀಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ರಸ್ತೆ ಬದಿ ವಿದ್ಯುತ್ ಕಂಬ ಅಳವಡಿಸಲು ಅಥವಾ ಗಿಡ ನೆಡಲು ರಸ್ತೆ ಅಗೆಯುವ ಮುನ್ನ ಲೋಕೋಪಯೋಗಿ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಖಲೀಲ್ ಸಾಬ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News