Ballari | ಗಂಗಾ ಕಲ್ಯಾಣ ಯೋಜನೆಯಡಿ ಪಂಪ್ ಮೋಟಾರ್ ವಿತರಣೆ
ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಕೃಷಿ ಅಭಿವೃದ್ಧಿಪಡಿಸಿಕೊಳ್ಳಿ: ಶಾಸಕಿ ಅನ್ನಪೂರ್ಣ ಈ. ತುಕಾರಾಂ
ಸಂಡೂರು/ಬಳ್ಳಾರಿ : ಸಂಡೂರು ವಿಧಾನಸಭಾ ಕ್ಷೇತ್ರದ 2021–22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಪಂಪ್ ಮೋಟಾರ್‌ಗಳನ್ನು ವಿತರಿಸುವ ಕಾರ್ಯಕ್ರಮ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಪಂಪ್ ಮೋಟಾರ್‌ಗಳನ್ನು ವಿತರಿಸಿ, ಯೋಜನೆಯ ಸದುಪಯೋಗ ಪಡೆದುಕೊಂಡು ಕೃಷಿ ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯು ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದರ ಮೂಲಕ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ. ನೀರಿನ ಸಮರ್ಪಕ ಬಳಕೆ ಹಾಗೂ ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡರೆ ಉತ್ತಮ ಆದಾಯ ಗಳಿಸಬಹುದು ಎಂದು ಹೇಳಿದರು.
ರೈತರು ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ದೂರವಿದ್ದು, ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಸಾವಯವ ಗೊಬ್ಬರಗಳಿಂದ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಹಾಗೂ ಆರೋಗ್ಯಕರ ಆಹಾರ ಉತ್ಪಾದನೆ ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಕೃಷಿಯು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳುವಂತೆ ರೈತರಿಗೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಆಶಾಲತಾ ಸೋಮಪ್ಪ, ಸಂಬಂಧಿತ ಇಲಾಖೆಯ ಅಧಿಕಾರಿಗಳು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.