×
Ad

Ballari | ಹಳೇ ಪಿಂಚಣಿ ಸೇರಿ ಪ್ರಮುಖ ಬೇಡಿಕೆ ಈಡೇರಿಕೆಗೆ ಜು.11ರಂದು ನೌಕರರ ಹಕ್ಕೊತ್ತಾಯ

Update: 2026-07-09 19:41 IST

ಬಳ್ಳಾರಿ, ಜು.9: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸುವ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಾಗೂ ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯ ಕಾರ್ಯಕ್ರಮ ಜು.11ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಡಾ. ನೆಲ್ಲುದ್ರಿ ಸದಾನಂದ ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ಸಿಜಿಹೆಚ್‌ಎಸ್ ದರಗಳನ್ನು ಹೆಚ್ಚಿಸಿ ಆದೇಶ ಹೊರಡಿಸಿರುವುದರಿಂದ ಸರ್ಕಾರಕ್ಕೆ 430 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಈ ಕ್ರಮಕ್ಕಾಗಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಂದೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಹಾಗೂ ಕೇಂದ್ರ ಮಾದರಿಯ ವೇತನ ವ್ಯವಸ್ಥೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸುವಂತೆ ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.

ಜು.11ರಂದು ಎರಡನೇ ಶನಿವಾರ ರಜೆಯಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಕುರಗೋಡು ಸೇರಿದಂತೆ ವಿವಿಧ ತಾಲೂಕುಗಳಿಂದ 500ಕ್ಕೂ ಹೆಚ್ಚು ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಎಲ್‌ಒ ಹಾಗೂ ಎಸ್‌ಐಆರ್ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು, ನೌಕರರ ಅನುಕೂಲಕ್ಕಾಗಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News