Ballari | ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಡಿಸಿ ಕೆ.ನಾಗೇಂದ್ರ ಪ್ರಸಾದ್
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ–2026ಕ್ಕೆ ಚಾಲನೆ
ಬಳ್ಳಾರಿ: ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರೊಂದಿಗೆ ಕ್ರೀಡಾಸ್ಫೂರ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಸಲಹೆ ನೀಡಿದರು.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ–2026ಕ್ಕೆ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ದಿನನಿತ್ಯದ ಕರ್ತವ್ಯದ ಒತ್ತಡದ ನಡುವೆಯೂ ಪೊಲೀಸ್ ಸಿಬ್ಬಂದಿ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ದೈಹಿಕ ಸಾಮರ್ಥ್ಯ ಉತ್ತಮವಾಗಿದ್ದರೆ ಮಾತ್ರ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಕ್ರೀಡೆಗಳು ಕೇವಲ ಸೋಲು-ಗೆಲುವಿಗೆ ಸೀಮಿತವಾಗಿಲ್ಲ. ಅವು ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ ಎಂದರು.
ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿರಂತರ ಕೆಲಸದಿಂದ ಪೊಲೀಸರು ಸಹಜವಾಗಿಯೇ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭದಲ್ಲಿ ಕ್ರೀಡೆಗಳು ಒತ್ತಡ ನಿವಾರಣೆಗೆ ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಗಮನ ಸೆಳೆದ ಪಥಸಂಚಲನ :
ಕ್ರೀಡಾಕೂಟದ ಆರಂಭದಲ್ಲಿ ಕೋಟೆ, ದುರ್ಗಾ, ಸಂಸ್ಕೃತಿ, ಸ್ಪಂದನ, ವೇದಾವತಿ, ಸ್ಕಂದಗಿರಿ ಹಾಗೂ ತುಂಗಾ ತಂಡಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ವಿವಿಧ ಘಟಕಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಎನ್. ಮಹಮ್ಮದ್ ಝುಬೇರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್. ನವೀನ್ ಕುಮಾರ್ ಉಪಸ್ಥಿತರಿದ್ದರು.