ಬಳ್ಳಾರಿ: ಮೆಣಸಿನಕಾಯಿ ಬೆಳೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ತಾಲ್ಲೂಕಿನ ಸಿಂಧುವಾಳ ಗ್ರಾಮದ ರೈತರು ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ (ಎಲ್‌ಎಲ್‌ಸಿ) ಮೂಲಕ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಗೆ ಹರಿಯುತ್ತಿದ್ದ ನೀರಿಗೆ ಮರಳಿನ ಚೀಲಗಳನ್ನು ಅಡ್ಡಲಾಗಿ ಹಾಕಿ ತಡೆದಿದ್ದಾರೆ.

ಗ್ರಾಮದ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಕಾಲುವೆಗೆ ಮರಳಿನ ಮೂಟೆಗಳನ್ನು ಹಾಕಿ ನೀರು ನಿಲ್ಲಿಸಿರುವ ರೈತರು, ತಮ್ಮ ಜಮೀನುಗಳಿಗೆ ನೀರು ಹರಿಸಿಕೊಳ್ಳಲು ಹರಸಾಹಸಪಡುತ್ತಿದ್ದಾರೆ. ಈ ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ರೈತರು ಎಕರೆಗೆ ಸುಮಾರು 2.50 ಲಕ್ಷ ರೂ.ವರೆಗೆ ಖರ್ಚು ಮಾಡಿ ವ್ಯಾಪಕವಾಗಿ ಮೆಣಸಿನಕಾಯಿ ಬೆಳೆದಿದ್ದಾರೆ. ಸದ್ಯ ಬೆಳೆ ಕಾಯಿ ಕಚ್ಚುವ ನಿರ್ಣಾಯಕ ಹಂತದಲ್ಲಿದ್ದು, ಜನವರಿವರೆಗೂ ನೀರಿನ ಅಗತ್ಯವಿದೆ. ಆದರೆ, ನ.28ರವರೆಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಿ ಬಳಿಕ ಸ್ಥಗಿತಗೊಳಿಸಿರುವುದರಿಂದ ಬೆಳೆ ಒಣಗಿ ಕೈಗೆ ಬಾರದ ಆತಂಕ ರೈತರನ್ನು ಕಾಡುತ್ತಿದೆ.

ಈ ನಿರ್ಣಾಯಕ ಹಂತದಲ್ಲಿ ನೀರು ಸ್ಥಗಿತಗೊಳಿಸಿದರೆ ಭಾರಿ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಅನಿವಾರ್ಯವಾಗಿ ಆಂಧ್ರಪ್ರದೇಶಕ್ಕೆ ಹರಿಯುತ್ತಿದ್ದ ನೀರನ್ನು ತಡೆದು ಬೆಳೆ ಉಳಿಸಿಕೊಳ್ಳಲು ಮುಂದಾಗಿದ್ದೇವೆ. ಸರ್ಕಾರ ಕೂಡಲೇ ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಬೆಳೆಗಳಿಗೆ ಸಮರ್ಪಕವಾಗಿ ನೀರು ಒದಗಿಸಬೇಕು ಎಂದು ಸಿಂಧುವಾಳ ಗ್ರಾಮದ ರೈತರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ