ಬಳ್ಳಾರಿ: ಮಕ್ಕಳಿಲ್ಲದ ದಂಪತಿಗಳು ಅಥವಾ ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಕಾನೂನುಬದ್ಧ ಮಾರ್ಗವನ್ನು ಅನುಸರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.

ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ-2026ರ ಅಂಗವಾಗಿ ಗುರುವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತೊಟ್ಟಿಲಲ್ಲಿ ಬೆಳೆಯಬೇಕಾದ ಮಗು ಅಕ್ರಮವಾಗಿ ಕಳ್ಳಸಾಗಣೆಯಾಗಬಾರದು. ಒಂಟಿ ಪೋಷಕರಿಗೆ ಜನಿಸಿದ ಅಥವಾ ವಿವಿಧ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತವಾದ ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ಪಡೆಯಲು ಸರ್ಕಾರಿ ವ್ಯವಸ್ಥೆಗಳಿದ್ದರೂ, ಹಲವರು ಅಕ್ರಮ ಮಾರ್ಗಗಳನ್ನು ಅನುಸರಿಸುತ್ತಿರುವುದು ಕಂಡುಬರುತ್ತಿದೆ. ಮಕ್ಕಳನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುವವರಿಗೆ ಸುಮಾರು ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ, ಆಸ್ಪತ್ರೆಗಳಲ್ಲಿ ಅನಾಥ ಮಕ್ಕಳನ್ನು ಅಕ್ರಮವಾಗಿ ದತ್ತು ಪಡೆಯಲು ಯಾರಾದರೂ ಸಹಕರಿಸಿದರೆ ಅಂತಹವರಿಗೂ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸುವ ಕಾನೂನು ಇದೆ ಎಂದು ತಿಳಿಸಿದರು.

ಜಾಗೃತಿ ಜಾಥಾವು ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭಗೊಂಡು ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಾಗಿ, ಮರಳಿ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಕೈಯಲ್ಲಿದ್ದ ಜಾಗೃತಿ ಘೋಷಣೆಗಳ ಫಲಕಗಳು ಗಮನಸೆಳೆದವು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಎಂ., ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್, ಜಿಲ್ಲಾಡಳಿತ ಕಚೇರಿಯ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor