×
Ad

Ballari | 63 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಉಪ್ಪಾರಹಳ್ಳಿಯಲ್ಲಿ ಶಾಲಾ ಕೊಠಡಿ, ಅರಳಿಹಳ್ಳಿ ತಾಂಡದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಚಾಲನೆ

Update: 2026-07-01 19:51 IST

ಬಳ್ಳಾರಿ/ಕಂಪ್ಲಿ : ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿವಿಧ ಯೋಜನೆಗಳಡಿ ಸುಮಾರು 63 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ತಾಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಸುಮಾರು 43 ಲಕ್ಷ ರೂ. ವೆಚ್ಚದಲ್ಲಿ ಮೂರು ಹೊಸ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಪೂಜೆ ನೆರವೇರಿಸಲಾಯಿತು.

ಬಳಿಕ ಮಾತನಾಡಿದ ಕೆ. ಶ್ರೀನಿವಾಸರಾವ್, ಶಾಸಕ ಜೆ.ಎನ್. ಗಣೇಶ್ ಅವರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುತ್ತಿದ್ದಾರೆ ಎಂದು ಹೇಳಿದರು. ಶೀಘ್ರದಲ್ಲೇ ಶಾಸಕ ಜೆ.ಎನ್. ಗಣೇಶ್ ಸಚಿವರಾಗಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ನೆಣಕಿ ಗಿರಿ, ಸಿಆರ್‌ಪಿಗಳಾದ ಗಂಗಾಧರ ಮತ್ತು ಪ್ರಭಾಕರ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ಕನಕಪ್ಪ, ಮುಖ್ಯಗುರು ಸಂಗನಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಮುಖಂಡ ಹನುಮನಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಇದೇ ವೇಳೆ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಹಳ್ಳಿ ತಾಂಡದಲ್ಲಿ 2018-20ನೇ ಸಾಲಿನ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಗನವಾಡಿ ಕೇಂದ್ರ ಹಾಗೂ ಶೌಚಾಲಯ ಕಟ್ಟಡ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ರಘುನಾಯಕ, ಮುಖಂಡರಾದ ಗವಿಸಿದ್ದಪ್ಪ, ಕರೇಕಲ್ ಮನೋಹರ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News