Ballari | ಸರ್ಕಾರಿ ಕಚೇರಿಗಳು ಭ್ರಷ್ಟಾಚಾರ ಮುಕ್ತವಾಗಬೇಕು: ಲೋಕಾಯುಕ್ತ ಪಿಐ ಸುರೇಶ ಬಾಗವಾನಿ
ಬಳ್ಳಾರಿ/ಕಂಪ್ಲಿ: ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾರದರ್ಶಕತೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ಒದಗಿಸಬೇಕು ಎಂದು ಬಳ್ಳಾರಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕ (ಪಿಐ) ಸುರೇಶ ಬಾಗವಾನಿ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಇಲಾಖೆ ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ಇಲಾಖೆಯ ಸಂಪರ್ಕ ವಿವರಗಳು, ಸರ್ಕಾರದ ವಿವಿಧ ಯೋಜನೆಗಳು, ಶುಲ್ಕ ಪಟ್ಟಿ ಹಾಗೂ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳ ಮಾಹಿತಿ ಫಲಕಗಳನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಅಳವಡಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳಿದ್ದರೆ ಅರ್ಜಿದಾರರಿಗೆ ಸಮರ್ಪಕ ಮಾಹಿತಿ ನೀಡಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಯೂ ತಮ್ಮ ಸೇವೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಅನಗತ್ಯ ಕಿರುಕುಳ ಎದುರಾದರೆ ಅದರ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ಹೇಳಿದರು.
ಸರ್ಕಾರಿ ಕಚೇರಿಗಳು ಭ್ರಷ್ಟಾಚಾರ ಮುಕ್ತವಾಗಬೇಕು ಎಂದು ಒತ್ತಿ ಹೇಳಿದ ಅವರು, ಕಂಪ್ಲಿ ತಾಲ್ಲೂಕಿನಿಂದ ಸರ್ಕಾರಿ ಕೆಲಸಗಳ ವಿಳಂಬ ಅಥವಾ ಭ್ರಷ್ಟಾಚಾರದ ಕುರಿತು ನಿರೀಕ್ಷಿತ ಪ್ರಮಾಣದಲ್ಲಿ ದೂರುಗಳು ಬರುತ್ತಿಲ್ಲ. ಸಾರ್ವಜನಿಕರಿಗೆ ಲೋಕಾಯುಕ್ತ ಅಹವಾಲು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಸಮರ್ಪಕ ಮಾಹಿತಿ ನೀಡದಿರುವುದು ಇದಕ್ಕೆ ಕಾರಣವಾಗಿರಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಮೆಟ್ರಿ ಬಸಪ್ಪ, ಕಾರ್ಯಕ್ರಮದ ಕುರಿತು ಮಾಹಿತಿ ಸಿಕ್ಕಿದ್ದರೆ ಹಲವಾರು ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದೆವು ಎಂದು ಹೇಳಿದರು.
ಸಾಮಾಜಿಕ ಕಾರ್ಯಕರ್ತ ನಾರಾಯಣಸ್ವಾಮಿ ತಮ್ಮ ಮೇಲೆ ನಡೆದಿರುವ ಹಲ್ಲೆಗಳ ಕುರಿತು ಹಲವು ಬಾರಿ ದೂರು ನೀಡಿದರೂ ನ್ಯಾಯ ದೊರಕಿಲ್ಲ ಎಂದು ಮೌಖಿಕ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಪಿಐ ಸುರೇಶ ಬಾಗವಾನಿ, ಪ್ರಕರಣಗಳ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಹಸೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ಲೋಕಾಯುಕ್ತ ಅಹವಾಲು ಸ್ವೀಕಾರ ಕಾರ್ಯಕ್ರಮದ ಕುರಿತು ಪತ್ರಿಕೆಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿನ ಸೂಚನಾ ಫಲಕಗಳ ಮೂಲಕ ವ್ಯಾಪಕ ಪ್ರಚಾರ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ. ಶ್ರೀಕುಮಾರ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಟಿಎಚ್‌ಒ ಡಾ. ಅರುಣಕುಮಾರ್, ಬಿಇಒ ಟಿ.ಎಂ. ಸಿದ್ಧಲಿಂಗಮೂರ್ತಿ, ಜೆಸ್ಕಾಂ ಎಇಇ ಶ್ರೀನಿವಾಸ ಪ್ರಸಾದ್, ಕೃಷಿ ಇಲಾಖೆ ಅಧಿಕಾರಿ ಟಿ. ಜ್ಯೋತಿ, ಸಿಡಿಪಿಒ ಮೋಹನ್ ಕಳಸಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.