Ballari | ನ. 27ರಂದು ಕನಕದಾಸ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಎಚ್.ಡಿ.ರಾಜೇಶ್
ಬಳ್ಳಾರಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 27ರಂದು ನಗರದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಹಾಯಕ ಆಯುಕ್ತ ಎಚ್.ಡಿ. ರಾಜೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನಕದಾಸರ ಕೀರ್ತನೆಗಳು, ತತ್ವಪದಗಳು ಹಾಗೂ ಸಮಾನತೆಯ ಸಂದೇಶವನ್ನು ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮೆರವಣಿಗೆಯ ಮಾರ್ಗ : ನವೆಂಬರ್ 27ರಂದು ಬೆಳಿಗ್ಗೆ 9 ಗಂಟೆಗೆ ಕನಕದಾಸ ವೃತ್ತದಲ್ಲಿರುವ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಮಹಾನಗರ ಪಾಲಿಕೆಯು ಪುತ್ಥಳಿಯ ಸ್ವಚ್ಛತೆ, ಬಣ್ಣ ಬಳಿಯುವುದು, ಹೂವಿನ ಅಲಂಕಾರ ಹಾಗೂ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ಬಳಿಕ ಮುನ್ಸಿಪಲ್ ಕಾಲೇಜು ಮೈದಾನದಿಂದ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದೆ ಎಂದರು.
ಮೆರವಣಿಗೆಯು ಇಂದಿರಾ ವೃತ್ತ, ಗಡಗಿ ಚನ್ನಪ್ಪ (ರಾಯಲ್) ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ, ಜೈನ್ ಮಾರ್ಕೆಟ್ ಹಾಗೂ ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ಸಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಲಿದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ರಂಗಮಂದಿರದ ಆವರಣದಲ್ಲಿ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಡಿಜೆ, ಬ್ಯಾನರ್ ಬಳಕೆಗೆ ನಿಷೇಧ : ಮಧ್ಯಾಹ್ನ 12 ಗಂಟೆಗೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕನಕದಾಸರ ಗೀತಗಾಯನ ಹಾಗೂ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ನಗರದಲ್ಲಿ ಬ್ಯಾನರ್ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಮತ್ತು ಸಂಘಟನೆಗಳು ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.