ಬಳ್ಳಾರಿ: ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ತಡೆಗಟ್ಟಲು ಹಾಗೂ ಪೊಲೀಸ್ ಇಲಾಖೆಯ ರಸ್ತೆ ಸುರಕ್ಷತಾ ನಿಯಮಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ನಗರದ ರಾಯಲ್ ಸರ್ಕಲ್‌ನಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಶನಿವಾರ ಆಯೋಜಿಸಿದ್ದ ಬೈಕ್ ಸವಾರರಿಗೆ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಸುಮನ ಡಿ. ಪನ್ನೇಕರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಬಳ್ಳಾರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ಇಂತಹ ಅಪಘಾತಗಳನ್ನು ತಡೆಯಲು ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಅಭಿಯಾನಗಳು ಅತ್ಯಗತ್ಯ ಎಂದು ಹೇಳಿದರು.

ಹುಟ್ಟುಹಬ್ಬದ ಹೆಸರಿನಲ್ಲಿ ಅನಗತ್ಯ ಖರ್ಚು ಮಾಡಿ ಕೇಕ್ ಕತ್ತರಿಸುವ ಬದಲು, ಸಾರ್ವಜನಿಕರ ಜೀವ ರಕ್ಷಿಸುವಂತಹ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಸಾರ್ವಜನಿಕರು ಕೇವಲ ದಂಡದ ಭಯದಿಂದ ಮಾತ್ರವಲ್ಲದೆ, ತಮ್ಮ ಸ್ವಂತ ಸುರಕ್ಷತೆ ಹಾಗೂ ಕುಟುಂಬದ ಹಿತದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಎಂದು ಕರೆ ನೀಡಿದರು.

ಸಮಿತಿಯ ನಗರ ಅಧ್ಯಕ್ಷ ಗಿರಿಶಂಕರ್ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮವನ್ನು ಸಮಿತಿ ಸ್ವಾಗತಿಸುತ್ತದೆ. ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರ ಜನ್ಮದಿನದ ಅಂಗವಾಗಿ ಸಾಮಾಜಿಕ ಕಳಕಳಿಯಿಂದ ಈ ಅಭಿಯಾನ ಆಯೋಜಿಸಿ, ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಪ್ರಮುಖ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor