×
Ad

Ballari | ಮಕ್ಕಳಿಗೆ ಶಿಕ್ಷಣ, ಸುರಕ್ಷಿತ ಬಾಲ್ಯ ಒದಗಿಸುವುದು ಎಲ್ಲರ ಕರ್ತವ್ಯ : ತಹಶೀಲ್ದಾರ್ ಜೂಗಲ್ ಮಂಜುನಾಯಕ

ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Update: 2026-06-12 20:15 IST

ಕಂಪ್ಲಿ (ಬಳ್ಳಾರಿ): ಮಕ್ಕಳ ಕೈಗೆ ಸಿಗಬೇಕಿರುವುದು ಪುಸ್ತಕಗಳು ಮತ್ತು ಆಟದ ಸಾಮಗ್ರಿಗಳೇ ಹೊರತು ದುಡಿಮೆಯ ಭಾರವಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ಹಾಗೂ ಸುರಕ್ಷಿತ ಬಾಲ್ಯ ಒದಗಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.

ಪಟ್ಟಣದ ಕೊಟ್ಟಾಲ್ ರಸ್ತೆಯ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಸಂಕಲ್ಪವಾಗಬೇಕು. ಮಕ್ಕಳಿಗೆ ಶಿಕ್ಷಣದ ಹಕ್ಕು ದೊರಕುವಂತೆ ನೋಡಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆಎಸ್‌ಎಸ್‌ವಿಬಿ ಸುಬ್ಬಾರಾವ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಸುನೀಲ್ ಮಾಲಿಪಾಟೀಲ್, ಇಒ ಟಿ.ಎಂ. ಬಸವರಾಜ, ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ. ತಳವಾರ, ಡಿಇಒ ಕೆ. ವಿಘ್ನೇಶ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ರಾಘವೇಂದ್ರ, ಪಿ. ಬಸವರಾಜ, ಜ್ಯೋತಿ, ಶ್ರೀಶೈಲಗೌಡ, ರಾಮಾಂಜಿನೇಯ, ತಿಪ್ಪೇಶ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News