ಬಳ್ಳಾರಿ: ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಕಚೇರಿಗಳಿಗೆ ಅಲೆದು ಬೇಸತ್ತಿರುವ ಸಾರ್ವಜನಿಕರ ಮನೆ ಬಾಗಿಲಿಗೇ ‘ಪ್ರಜಾಸೇವೆ’ ಬಂದಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ (ಎ.ಸಿ.) ಎಚ್.ಡಿ. ರಾಜೇಶ್ ಕರೆ ನೀಡಿದರು.

ತಾಲ್ಲೂಕಿನ ಹಲಕುಂದಿ ಗ್ರಾಮದ ಪೋತಪ್ಪಕಟ್ಟೆ ಬಳಿಯ ಸಮುದಾಯ ಭವನದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ ‘ಪ್ರಜಾಸೇವಾ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ತೆರಳಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ ವಿವಿಧೆಡೆ ಸ್ವೀಕರಿಸಿದ ಅಹವಾಲುಗಳಲ್ಲಿ ಕಾನೂನು ಚೌಕಟ್ಟಿನೊಳಗೆ ಬರುವ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಆನ್‌ಲೈನ್‌ನ ಐಪಿಜಿಆರ್‌ಎಸ್ (IPGRS) ಪೋರ್ಟಲ್‌ನಲ್ಲಿ ಸಲ್ಲಿಸುವಾಗ ಪೂರಕ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ತಿಳಿಸಿದರು.

ಕಾನೂನು ಪ್ರಕಾರ ಸರ್ಕಾರದಿಂದ ಗುರುತಿಸಲಾದ ಜಮೀನಿನಲ್ಲಿ ಮನೆಗಳನ್ನು ಒದಗಿಸಲಾಗುವುದು. ಜಿಲ್ಲೆಗೆ 15 ಲಕ್ಷ ನಿವೇಶನಗಳು ಮಂಜೂರಾಗಿದ್ದು, ಸದ್ಯ ಪ್ರಾಥಮಿಕ ಹಂತದಲ್ಲಿ ಕೆಎಂಇಆರ್‌ಸಿ (KMERC) ಅಡಿಯಲ್ಲಿ 5 ಲಕ್ಷ ನಿವೇಶನಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆನ್‌ಲೈನ್ ಅರ್ಜಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ ಬಳಿಕ ಶೀಘ್ರದಲ್ಲೇ ಅರ್ಜಿ ಸ್ವೀಕಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮಸ್ಥರ ಆಕ್ರೋಶ, ಮನವಿ : ಸಭೆಯಲ್ಲಿ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಹಲವರು ಕಾನೂನುಬದ್ಧವಾಗಿ ನಿವೇಶನಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದರು. ಹಲಕುಂದಿ ಗ್ರಾಮದಲ್ಲಿ ಫಲಾನುಭವಿಗಳಿಗೆ ಸಮರ್ಪಕವಾಗಿ ಮನೆಗಳು ಮಂಜೂರಾಗದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬೇಸಿಗೆ ಬಂದಾಗ ಮಾತ್ರ ಕೆರೆಯಲ್ಲಿ ನೀರು ಇರುತ್ತದೆ. ಉಳಿದ ದಿನಗಳಲ್ಲಿ ಕೆರೆಯಲ್ಲಿ ನೀರಿಲ್ಲದೆ ತೀವ್ರ ಸಮಸ್ಯೆ ಎದುರಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಅಲ್ಲದೆ, ಸರ್ವರ್ ಸಮಸ್ಯೆಯ ನೆಪವೊಡ್ಡಿ ನ್ಯಾಯಬೆಲೆ ಅಂಗಡಿಯಲ್ಲಿ ಕೆಲವೇ ದಿನಗಳು ಪಡಿತರ ಧಾನ್ಯ ವಿತರಿಸಲಾಗುತ್ತಿದೆ ಎಂದು ಆರೋಪಿಸಿದರು.

ತಹಶೀಲ್ದಾರ್ ನರಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾ.ಪಂ. ಇಒ ಶ್ರೀಧರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ