Ballari | ಮೊಬೈಲ್ ಬಳಕೆಯಿಂದ ಓದುವ ಹವ್ಯಾಸ ಕುಗ್ಗುತ್ತಿದೆ: ಯಾಳ್ಪಿ ವಲಿಭಾಷ ಕಳವಳ

Update: 2026-07-24 23:05 IST

ಕಂಪ್ಲಿ (ಬಳ್ಳಾರಿ): ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್‌ ಬಳಕೆ ಹೆಚ್ಚಾಗುತ್ತಿರುವ ಪರಿಣಾಮ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಇದು ಅವರ ಭವಿಷ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಹೇಳಿದರು.

ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಮೊಬೈಲ್‌ಗೆ ಅಂಟಿಕೊಳ್ಳುವುದನ್ನು ಬಿಟ್ಟು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಓದುವಿಕೆ ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿ ಹೊಂದಿ ಅದನ್ನು ಸಾಧಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಸಮಾಜ ಹಾಗೂ ದೇಶದ ಬಗ್ಗೆ ಕಾಳಜಿ ಹೊಂದಲು ಉತ್ತಮ ಚಿಂತನೆ, ವಿವೇಚನಾ ಶಕ್ತಿ ಮತ್ತು ವಿಶ್ಲೇಷಣಾ ಮನೋಭಾವ ಅಗತ್ಯ. ಪ್ರತಿಯೊಂದು ವಿಷಯವನ್ನು ವಿಮರ್ಶಾತ್ಮಕವಾಗಿ ಅರ್ಥೈಸುವ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಅತ್ಯಂತ ಮುಖ್ಯ ಎಂದು ತಿಳಿಸಿದರು.

ಜನಪ್ರತಿನಿಧಿಗಳು ನೀಡುವ ಭರವಸೆಗಳು ಕಾರ್ಯರೂಪಕ್ಕೆ ಬಾರದ ಸಂದರ್ಭಗಳಲ್ಲಿ ಅದನ್ನು ಸಮಾಜದ ಗಮನಕ್ಕೆ ತರುವ ಜವಾಬ್ದಾರಿಯನ್ನು ಪತ್ರಕರ್ತರು ನಿರ್ವಹಿಸುತ್ತಾರೆ. ಸಮಾಜದಲ್ಲಿನ ತಪ್ಪು-ಸರಿಗಳನ್ನು ಜನರಿಗೆ ತಿಳಿಸುವ ಮೂಲಕ ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ಅಂಕುಶವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಐ ಆಧಾರಿತ ಸಾಧನಗಳು ಲೇಖನಗಳನ್ನು ಹೆಚ್ಚು ಸ್ಪಷ್ಟವಾಗಿ ರೂಪಿಸಲು ಹಾಗೂ ತಪ್ಪುಗಳನ್ನು ತಿದ್ದುಪಡಿ ಮಾಡಲು ನೆರವಾಗುತ್ತವೆ. ಆದರೆ ಅನುಭವ, ಸೃಜನಶೀಲತೆ ಮತ್ತು ಮಾನವೀಯ ಮೌಲ್ಯಗಳಿಗೆ ಎಐ ಪರ್ಯಾಯವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ. ಗಿರೀಶ್ ಕುಮಾರ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಕಂಪ್ಲಿ ಘಟಕದ ಅಧ್ಯಕ್ಷ ಸಿದ್ದಿ ರಘುವೀರ್ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ. ಬಜಾರಪ್ಪ, ಕುರುಗೋಡು ವೀರಭದ್ರಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗೇಶ್ ಯಾದವ್, ವೀರಶೈವ ಲಿಂಗಾಯತ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್, ಕಾಲೇಜಿನ ಪ್ರಾಂಶುಪಾಲ ಸಿದ್ದಣ್ಣ ಪರಮೇಶ್ವರ, ತಾಪಂ ಇಒ ಆರ್.ಕೆ. ಶ್ರೀಕುಮಾರ್, ದಲಿತ ಮುಖಂಡ ಕೆ. ಲಕ್ಷ್ಮಣ, ಹಿರಿಯ ಪತ್ರಕರ್ತ ಭಾವೈಕ್ಯ ವೆಂಕಟೇಶ, ಎಎಸ್‌ಐ ಬಸವರಾಜಪ್ಪ, ವಕೀಲ ಸುದರ್ಶನ್ ರೆಡ್ಡಿ, ಡಾ. ರವೀಂದ್ರ, ಮುಖ್ಯಶಿಕ್ಷಕಿ ಸುಜಾತಾ, ಪಿಡಬ್ಲ್ಯುಡಿ ಇಂಜಿನಿಯರ್ ಆನಂದ್, ಜಿಲ್ಲಾ ಕಾರ್ಯಕಾರಿ ಸದಸ್ಯ ರವಿ ಮಣ್ಣೂರು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಳೇ ಮಲ್ಲಿಕಾರ್ಜುನ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಅಧಿಕಾರಿ ಕೆ. ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹೆಚ್. ಮರಿಯಪ್ಪ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News