Ballari | ಮೃತಪಟ್ಟ ಫಲಾನುಭವಿಗಳ ಖಾತೆಯಲ್ಲಿರುವ ಗೃಹಲಕ್ಷ್ಮಿ ಹಣ ಹಿಂಪಡೆಯುವ ಪ್ರಕ್ರಿಯೆ ಸರಳಗೊಳಿಸಿ: ಪರಮೇಶ್ವರ ನಾಯ್ಕ
ಬಳ್ಳಾರಿ: ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಂದ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ಹಿಂಪಡೆಯುವ ಸಂದರ್ಭದಲ್ಲಿ ಎದುರಾಗಿರುವ ತಾಂತ್ರಿಕ ಅಡೆತಡೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿಯ ವಿಡಿಯೋ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಯೊಂದಿಗೆ ಪತ್ರ ವ್ಯವಹಾರ ನಡೆಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಯೋಜನೆಯಡಿ ತಪ್ಪಾಗಿ ಜಮೆಯಾಗಿರುವ ಅಥವಾ ಮೃತಪಟ್ಟ ಫಲಾನುಭವಿಗಳ ಖಾತೆಗಳಲ್ಲಿ ಉಳಿದಿರುವ ಹಣವನ್ನು ನಿಯಮಾನುಸಾರ ಸರ್ಕಾರಕ್ಕೆ ಮರುಪಾವತಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ಸರ್ಕಾರದ ಅನುದಾನವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ಹಾಗೂ ತಾಂತ್ರಿಕ ಗೊಂದಲಗಳನ್ನು ನಿವಾರಿಸಲು ಸಹಕಾರಿಯಾಗಲಿದೆ. ಅದೇ ರೀತಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಗಳ ರಚನೆ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದರು.
ಎನ್‌ಪಿಸಿಐ ವೈಫಲ್ಯ, ಐಟಿ/ಜಿಎಸ್‌ಟಿ ಹಾಗೂ ಇ-ಕೆವೈಸಿ ಕೊರತೆಯಂತಹ ತಾಂತ್ರಿಕ ಕಾರಣಗಳಿಂದ ಕೆಲವರು ಯೋಜನೆಗಳ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆಗಳನ್ನು ಸರಿಪಡಿಸುವ ಪ್ರಕ್ರಿಯೆಗೆ ವೇಗ ನೀಡಬೇಕು. ಮುಂಬರುವ ಸಭೆಯೊಳಗೆ ಬಾಕಿ ಇರುವ ಎಲ್ಲ ತಾಂತ್ರಿಕ ಹಾಗೂ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿ, ನಿಖರವಾದ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಗೋನಾಳ್ ನಾಗಭೂಷಣಗೌಡ (ಬಳ್ಳಾರಿ ತಾಲೂಕು), ನುರುದ್ದೀನ್ ಎಸ್. ತಾರಾನಗರ (ಸಂಡೂರು ತಾಲೂಕು), ಶ್ರೀನಿವಾಸರಾವ್ (ಕಂಪ್ಲಿ ತಾಲೂಕು), ಜಿ. ಬಸವನಗೌಡ (ಕುರುಗೋಡು ತಾಲೂಕು) ಸೇರಿದಂತೆ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.