ಬಳ್ಳಾರಿ: 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಪ್ರತಿ ಆರು ತಿಂಗಳಿಗೊಮ್ಮೆ ಮಧುಮೇಹ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ. ಸಲಹೆ ನೀಡಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಧುಮೇಹ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಧುಮೇಹದ ವಿರುದ್ಧ ಆರಂಭಿಕ ಕ್ರಮ–ಉತ್ತಮ ಆರೋಗ್ಯದತ್ತ ಮೊದಲ ಹೆಜ್ಜೆ’ ಎಂಬುದು ಈ ಬಾರಿಯ ವಿಶ್ವ ಮಧುಮೇಹ ದಿನದ ಘೋಷವಾಕ್ಯವಾಗಿದೆ ಎಂದರು.

ಅಧಿಕ ಬಾಯಾರಿಕೆ, ಪದೇಪದೇ ಮೂತ್ರ ವಿಸರ್ಜನೆ, ಅತಿಯಾದ ಹಸಿವು, ಯಾವುದೇ ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ತೀವ್ರ ಸುಸ್ತು ಹಾಗೂ ನಿಶ್ಯಕ್ತಿ, ದೃಷ್ಟಿ ಮಂದವಾಗುವುದು ಮತ್ತು ಗಾಯಗಳು ಬೇಗ ಗುಣವಾಗದಿರುವುದು ಮಧುಮೇಹದ ಪ್ರಮುಖ ಲಕ್ಷಣಗಳಾಗಿವೆ ಎಂದು ವಿವರಿಸಿದರು.

ಮಕ್ಕಳಲ್ಲೂ ಹೆಚ್ಚುತ್ತಿರುವ ಮಧುಮೇಹ:

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸವರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಿರಿಯರಷ್ಟೇ ಅಲ್ಲದೆ ಮಕ್ಕಳಲ್ಲೂ ಮಧುಮೇಹ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಕ್ಕಳ ಆರೋಗ್ಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅನಾರೋಗ್ಯಕರ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದ ಮಕ್ಕಳನ್ನು ದೂರವಿಡಬೇಕು ಎಂದು ಹೇಳಿದರು.

ಜಾಗೃತಿ ಜಾಥಾ, ಮಾನವ ಸರಪಳಿ:

ಸಭಾ ಕಾರ್ಯಕ್ರಮದ ಬಳಿಕ ಜಿಲ್ಲಾಸ್ಪತ್ರೆಯಿಂದ ಆರಂಭಗೊಂಡ ಮಧುಮೇಹ ಜಾಗೃತಿ ನಡಿಗೆ ಜಾಥಾವು ಪವನ್ ಹೋಟೆಲ್ ರಸ್ತೆ, ರೂಪನಗುಡಿ ರಸ್ತೆ, ದೊಡ್ಡ ಮಾರ್ಕೆಟ್, ಬ್ರೂಸ್ ಪೇಟೆ, ಬೆಂಗಳೂರು ರಸ್ತೆ ಮೂಲಕ ಸಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಪುನಃ ಜಿಲ್ಲಾ ಆಸ್ಪತ್ರೆಗೆ ತಲುಪಿತು. ದೊಡ್ಡ ಮಾರ್ಕೆಟ್ ಹಾಗೂ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಮೇದಿನಿ, ಡಾ. ಬಿ.ಕೆ. ಸುಂದರ್, ಡಾ. ತಿಪ್ಪಾರೆಡ್ಡಿ, ಬಿಎಂಸಿಆರ್‌ಸಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿ, ಐಎಂಎ ಪದಾಧಿಕಾರಿಗಳಾದ ಡಾ. ಜಬೀನ್ ತಾಜ್, ಡಾ. ವಿಶಾಲಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ., ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜಡಗಣ್ಣವರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ