Ballari | ನೂತನ ಮುಖ್ಯಗುರುಗಳಿಗೆ ಆತ್ಮೀಯ ಸ್ವಾಗತ, ಸನ್ಮಾನ

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ

Update: 2026-07-18 22:40 IST

ಸಂಡೂರು/ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಇತ್ತೀಚೆಗೆ ಮುಖ್ಯಗುರುಗಳಾಗಿ ಬಡ್ತಿ ಹೊಂದಿದ ಶಿಕ್ಷಕರನ್ನು ಬಡ್ತಿ ಮುಖ್ಯಗುರುಗಳ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನೂತನ ಮುಖ್ಯಗುರುಗಳಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಬಿ. ಪ್ರಕಾಶ್, ಮುಖ್ಯಗುರುಗಳ ಜವಾಬ್ದಾರಿ ಶಾಲಾ ಆಡಳಿತಕ್ಕೆ ಮಾತ್ರ ಸೀಮಿತವಾಗಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಮುಖ್ಯಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಮುಖ್ಯಗುರುಗಳು ಎದುರಿಸುತ್ತಿರುವ ಆಡಳಿತಾತ್ಮಕ, ಶೈಕ್ಷಣಿಕ ಹಾಗೂ ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಎಲ್ಲರೂ ಸಂಘಟಿತರಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಸಂಘದ ಮೂಲಕ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಸಮಸ್ಯೆಗಳನ್ನು ತಂದು ನ್ಯಾಯಯುತ ಪರಿಹಾರ ಪಡೆಯಲು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎ. ಯರ್ರಿಸ್ವಾಮಿ ಮಾತನಾಡಿ, ಬಡ್ತಿ ಹೊಂದಿದ ಮುಖ್ಯಗುರುಗಳು ತಮ್ಮ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರ ಜೊತೆಗೆ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸಮನ್ವಯದ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಮುಖ್ಯಗುರುಗಳ ಸಮಸ್ಯೆಗಳನ್ನು ವೈಯಕ್ತಿಕವಾಗಿ ನೋಡದೆ ಸಂಘದ ಸಮಸ್ಯೆಯಾಗಿ ಪರಿಗಣಿಸಿ ಒಟ್ಟಾಗಿ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸಂಘದ ಶಕ್ತಿಯೇ ಸದಸ್ಯರ ಒಗ್ಗಟ್ಟು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ನೂತನ ಮುಖ್ಯಗುರುಗಳು ಸಂಘದ ಮಾರ್ಗದರ್ಶನದಲ್ಲಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಿ. ಪಾಂಡುರಂಗಪ್ಪ, ಎಸ್. ಮಲ್ಲಿಕಾರ್ಜುನ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ನೂತನ ಮುಖ್ಯಗುರುಗಳಿಗೆ ಶುಭಾಶಯ ಕೋರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News