×
Ad

ಬಳ್ಳಾರಿ | ಗುಂಡು ಹಾರಿಸಿ ಅಂತರ್‌ರಾಜ್ಯ ಕಳವು ಪ್ರಕರಣದ ಆರೋಪಿಯ ಬಂಧನ

Update: 2025-05-16 23:08 IST

ಸಾಂದರ್ಭಿಕ ಚಿತ್ರ

ಬಳ್ಳಾರಿ : ಪೊಲೀಸರ ಗುಂಡು ಹಾರಿಸಿ ಅಂತರ್‌ರಾಜ್ಯ ಕಳವು ಪ್ರಕರಣಗಳ ಆರೋಪಿಯೋರ್ವನನ್ನು ಬಂಧಿಸಿರುವ ಘಟನೆ ಜಿಲ್ಲೆಯ ಸಿರುಗುಪ್ಪನಗರದಲ್ಲಿ ಶುಕ್ರವಾರ ಬೆಳಗ್ಗೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಅಂಬ್ರೇಶ್ ಎಂದು ಗುರುತಿಸಲಾಗಿದೆ.

ಕರ್ನಾಟಕ, ತೆಲಂಗಾಣ, ಆಂಧ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಗಾಳಿಯಲ್ಲಿ ಎರಡು ಬಾರಿ ಗುಂಡು ಹಾರಿಸಿ ನಂತರ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಈ ಕುರಿತು ಪ್ರತಿಕ್ರಿಯಿಸಿ, ಡಕಾಯಿತಿಗೆ ಸಂಬಂಧಿಸಿದಂತೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ತನಿಖೆ ಕೈಗೊಂಡಾಗ ಏಳು ಜನ ಭಾಗಿಯಾದ ಮಾಹಿತಿ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿ ಅಂಬ್ರೇಶ್‌ನನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು.

ನಂತರ ತನಿಖಾ ತಂಡ ರಚಿಸಿ, ಗುರುವಾರ ಆರೋಪಿಯನ್ನು ವಶಕ್ಕೆ ಪಡೆದು ಮಹಜರಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ, ಪೊಲೀಸ್ ಕಾನ್‌ಸ್ಟೇಬಲ್‌ಗಳಾದ ವಿರುಪಾಕ್ಷಪ್ಪ ಗೌಡ ಹಾಗೂ ಮಾರುತಿ ಮೇಲೆ ಮತ್ತೆ ಹಲ್ಲೆ ಮಾಡಿ ಪರಾರಿಯಾಗಲು ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ.

ಆಗ ಸಿಪಿಐ ವೈ.ಎಸ್.ಹನುಮಂತಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದರೂ ಆಗ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ನಂತರ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಗಾಯಗೊಂಡ ಆರೋಪಿಯನ್ನು ಬಂಧಿಸಿ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿರುಗುಪ್ಪ ಪೊಲೀಸ್ ಕಾನ್‌ಸ್ಟೇಬಲ್ ವಿರುಪಾಕ್ಷಪ್ಪ ಗೌಡ ಮತ್ತು ಮಾರುತಿ ಅವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News