×
Ad

ಬಳ್ಳಾರಿ | ಅನಧಿಕೃತ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಮೇಲೆ ಕ್ರಮ ಜರುಗಿಸಿ : ಡಿಸಿ ಮುಹಮ್ಮದ್ ಝುಬೇರ್

Update: 2025-10-29 20:30 IST

ಬಳ್ಳಾರಿ : ಜಿಲ್ಲೆಯಲ್ಲಿ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಝುಬೇರ್ ಅವರು ಹೇಳಿದರು.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶ ಅಧೀನದ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಸರ್ಕಾರದ ಮಾನದಂಡಗಳಡಿ ಪರವಾನಿಗೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಿ ತ್ವರಿತವಾಗಿ ಟಿಒಎಫ್‌ಇಐ ಆಪ್ ನಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಶಾಲಾ-ಕಾಲೇಜು ಮಕ್ಕಳು ಒಂದು ಬಾರಿ ತಂಬಾಕು ಉತ್ಪನ್ನಗಳಿಗೆ ದಾಸರಾದರೆ, ಅದರಿಂದ ಹೊರಬರುವುದು ಕಷ್ಟಕರ. ಹಾಗಾಗಿ ಅಧಿಕಾರಿಗಳು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ, ಗ್ರಾಮೀಣ ಕ್ಷೇತ್ರಗಳಲ್ಲಿ ಮತ್ತು ಸಮುದಾಯಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಧೂಮಪಾನ ವಲಯ ಸ್ಥಾಪಿಸಿ, ಅವುಗಳ ಉಪಯೋಗ, ಕ್ರಮಬದ್ಧತೆ ಕುರಿತು ಅಬಕಾರಿ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆ ಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಕ್ರಮವಹಿಸಬೇಕು. ನಿಲ್ದಾಣ ಅಂದಗೆಡಿಸುವ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸಿ, ಎಲ್ಲೆಂದರಲ್ಲಿ ಉಗುಳುವವರ ಮೇಲೆ ದಂಡ ವಿಧಿಸಬೇಕು ಎಂದು ಕಕರಾರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿದರು.

ಇದೇ ವೇಳೆ ಜಿಲ್ಲೆಯಲ್ಲಿ ಡಿ.6 ರವರೆಗೆ ನಡೆಯುವ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News