ಬಳ್ಳಾರಿ| ಬುಡಕಟ್ಟು ಸಮುದಾಯದ ಕಲ್ಯಾಣ ಯೋಜನೆಗಳ ಜಾಗೃತಿ ಅಭಿಯಾನಕ್ಕೆ ಚಾಲನೆ
ಸಂಡೂರು : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಮೇ.18 ರಿಂದ 25ರವರೆಗೆ “ಜನ ಭಾಗಿದಾರಿ – ಅತಿದೂರದಲ್ಲಿರುವವರಿಗೆ ಮೊದಲ ಆದ್ಯತೆ” ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವುದು ಮತ್ತು ಅವುಗಳಿಗೆ ಅಗತ್ಯ ದಾಖಲೆಗಳ ಬಗ್ಗೆ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಈ ಕುರಿತು ಜಿಲ್ಲಾ ಪಂಚಾಯಿತಿ ಬಳ್ಳಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಆದೇಶದಂತೆ ಬಳ್ಳಾರಿ ಜಿಲ್ಲೆಯ 59 ಗ್ರಾಮಗಳಲ್ಲಿ ಮತ್ತು ಸಂಡೂರು ತಾಲೂಕಿನ ಆಯ್ಕೆಯಾದ 20 ಗ್ರಾಮಗಳಲ್ಲಿ ಜಾಗೃತಿ ಮತ್ತು ಸೌಲಭ್ಯ ತೃಪ್ತಿ ಶಿಬಿರಗಳನ್ನು ಆಯೋಜಿಸಲಾಗಿದೆ. ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನ್ಮನ್) ಹಾಗೂ ಧರಿತ್ರಿ ಆದಿವಾಸಿ ಗ್ರಾಮ ಉತ್ತೇಜನ ಅಭಿಯಾನ (ಡಿಎ-ಜುಗಾ) ಯೋಜನೆಗಳ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಲಾಗುತ್ತಿದೆ.
ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಶಿಬಿರ ನಡೆಯುವ ಗ್ರಾಮಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವ ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬೀರಪ್ಪ, ಕರ ವಸೂಲಿಗಾರ ಈರಣ್ಣ, ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಘನಾ, ಆಶಾ ಕಾರ್ಯಕರ್ತೆಯರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ರಂಗನಾಥ್ ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.