×
Ad

ಬಳ್ಳಾರಿ | ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರ ಧರಿಸಿ ಕಾರ್ಯ ನಿರ್ವಹಿಸಬೇಕು : ಚಂದ್ರಕಲಾ

Update: 2025-07-25 22:34 IST

ಬಳ್ಳಾರಿ : ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹಾಗು ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು ಹೇಳಿದರು.

ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಮತ್ತು ಗುರುತಿಸಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಮತ್ತು ಮೃತಪಟ್ಟ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅವಲಂಬಿತರೊಂದಿಗೆ ಏರ್ಪಡಿಸಿದ್ದ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳು ಸಕಾಲದಲ್ಲಿ ತಲುಪುತ್ತಿದೆಯೇ ಎಂಬುದರ ಮೇಲುಸ್ತುವಾರಿ ಪರಿಶೀಲನೆ ಕೈಗೊಳ್ಳುವುದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಮುಖಂಡರಾದ ರತ್ನಮ್ಮ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಲೋನ್ ವ್ಯವಸ್ಥೆ ನೀಡಬೇಕು. ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಬೇಕು ಮತ್ತು ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯದರ್ಶಿಯವರ ಗಮನಕ್ಕೆ ತಂದರು.

ಕಲಾವತಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಂಶೋಧನಾಧಿಕಾರಿ ಮಹಾದೇವಸ್ವಾಮಿ ಅವರು ಮಾತನಾಡಿದರು.

ಇದೇ ವೇಳೆ ವೇತನ ಪಾವತಿ, ನೇರಪಾವತಿ, ಬೆಳಗಿನ ಉಪಾಹಾರ ವಿತರಣೆ, ಇಪಿಎಫ್ ಮತ್ತು ಇಎಸ್‌ಐ ಪಾವತಿ ಕುರಿತು ಪೌರಕಾರ್ಮಿಕರ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಸಫಾಯಿ ಕರ್ಮಚಾರಿ ವಿಭಾಗದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಕಂದಕೂರು ರಾಮುಡು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ರಾಘು, ಜಿಲ್ಲಾ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ ಸೇರಿದಂತೆ ಪಾಲಿಕೆಯ ಪರಿಸರ ಅಭಿಯಂತರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News