ಬಳ್ಳಾರಿ| ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಸಮಾಜದಿಂದ ಸಿಎಂಗೆ ಮನವಿ
ಸಂಡೂರು/ಬಳ್ಳಾರಿ : ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಬೇಡಿಕೆಗೆ ಸಂಬಂಧಿಸಿದಂತೆ ಕಳೆದ 30 ವರ್ಷಗಳಿಂದ ಸಮುದಾಯದ ಬೇಡಿಕೆಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸಂಡೂರು ತಾಲೂಕು ಘಟಕದ ಪದಾಧಿಕಾರಿಗಳು, ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಪ್ಪು ಪಟ್ಟಿ ಧರಿಸಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಸರಳವಾಗಿ ಪೂಜೆ ಸಲ್ಲಿಸಿದ ಬಳಿಕ, ಮಹಾಸಭಾದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಕಪ್ಪು ಪಟ್ಟಿ ಧರಿಸಿ ವಿಜಯ ಸರ್ಕಲ್ ಮಾರ್ಗವಾಗಿ ತಾಲೂಕು ಕಚೇರಿಗೆ ತೆರಳಿದರು. ಅಲ್ಲಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಮುದಾಯದ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಹಾಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ದೀರ್ಘಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿ, ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಹಾಸಭಾದ ಪದಾಧಿಕಾರಿಗಳು ಆಗ್ರಹಿಸಿದರು.
ಮನವಿ ಸಲ್ಲಿಸಿದ ಬಳಿಕ ಸಮಾಜದ ಮುಖಂಡರು ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡ ಜಯಣ್ಣ ಅವರು, “ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲು ಸಾಂಕೇತಿಕವಾಗಿ ಕಪ್ಪು ಪಟ್ಟಿ ಧರಿಸಿ ಮನವಿ ಸಲ್ಲಿಸಿದ್ದೇವೆ. ನವೆಂಬರ್ 5ರಂದು ಸಂಡೂರಿನಲ್ಲಿ ವಿವಿಧ ಕಲಾತಂಡಗಳೊಂದಿಗೆ, ಎಲ್ಲ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಅತ್ಯಂತ ವಿಜೃಂಭಣೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಅಂಬರೀಷ್ ವಿ., ಉಪಾಧ್ಯಕ್ಷರಾದ ಎನ್. ಚಂದ್ರು, ಹೆಚ್.ಟಿ. ವೆಂಕಟೇಶ್, ಶ್ರೀನಿವಾಸ ಟಿ., ಹನುಮಯ್ಯ ಎನ್.ಪಿ., ಪ್ರಧಾನ ಕಾರ್ಯದರ್ಶಿಗಳಾದ ಆರ್. ರಘುನಾಥ, ವಿರಿಸ್ವಾಮಿ ಟಿ., ಕಾರ್ಯದರ್ಶಿಗಳಾದ ಓಬಲೇಶ್ ಹೆಚ್., ಹುಲಿರಾಜ್ ಕೆ., ಎನ್. ರಮೇಶ್, ಬಿ. ಶಂಕರ್, ಬಾಂಡ್ರೆಪ್ಪ ಟಿ., ದೇವೇಂದ್ರಪ್ಪ ವಿ., ಪ್ರಶಾಂತ ಯು., ಕಾನೂನು ಸಲಹೆಗಾರರಾದ ಕೃಷ್ಣಮೂರ್ತಿ ವಿ.ಜಿ., ಕುಮಾರಸ್ವಾಮಿ, ಪರಶುರಾಮ ಪಿ. ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಎನ್. ಪೂರ್ಣಿಮಾ, ಪ್ರಧಾನ ಕಾರ್ಯದರ್ಶಿ ಟಿ. ಕವಿತಾ ಹಾಗೂ ಸದಸ್ಯೆ ಗೌರಮ್ಮ ಭಾಗವಹಿಸಿದ್ದರು.