×
Ad

ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ: ಸಚಿವ ರಹೀಂ ಖಾನ್

Update: 2025-08-15 19:53 IST

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೂರಕವಾಗಿ ಸಾಕಷ್ಟು ಯೋಜನೆ-ಕಾರ್ಯಗಳು ನಡೆಯುತ್ತಿವೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿವಿಧ ಅನುದಾನಗಳಡಿ ಸುಮಾರು 2 ಸಾವಿರ ಕೋಟಿ ರೂ.ಗಳಷ್ಟು ಕಾಮಗಾರಿಗಳು ನಡೆದಿದ್ದು, ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ 227 ಕೋಟಿ ರೂ. ವೆಚ್ಚದಲ್ಲಿ 24*7 ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು 135 ರಿಂದ 150 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೆಗಾಡೇರಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಪ್ರತ್ಯೇಕವಾಗಿ ಮೀಸಲಿಟ್ಟಿದ್ದು, ಆ ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಕಟ್ಟಡ ಕಾಮಗಾರಿಗಳಿಗೆ ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರವು ಜನ ಸಾಮಾನ್ಯರಿಗೆ ಅತ್ಯುತ್ತಮ ಆಡಳಿತ ನೀಡಲು ಮುಂದಾಗಿದ್ದು, ಈ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಇ-ಖಾತಾ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಬಳ್ಳಾರಿಯಲ್ಲಿಯೇ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಭಾಗದ ತುಂಗಭದ್ರಾ ಅಣೆಕಟ್ಟಿನ 19 ನೇ ಕ್ರಸ್ಟ್ ಗೇಟ್ ಅಳವಡಿಕೆ ಕುರಿತಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News