ಬಳ್ಳಾರಿ | ಸಣ್ಣ ನೀರಾವರಿ, ನೀರಿನಾಸರೆಗಳ ಗಣತಿ ಕಾರ್ಯ ಅಚ್ಚುಕಟ್ಟಾಗಿರಲಿ : ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ : ಜಿಲ್ಲೆಯಲ್ಲಿನ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 7ನೇ ಸಣ್ಣ ನೀರಾವರಿ ಮತ್ತು 2ನೇ ನೀರಿನಾಸರೆಗಳ ಗಣತಿ ಕಾರ್ಯದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ.100ರಷ್ಟು ಕೇಂದ್ರ ಸುರಕ್ಷಿತ ಸಣ್ಣ ನೀರಾವರಿ ಅಂಕಿ-ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ಗಣತಿ ಕಾರ್ಯ ಮಾಡುವ ಮೇಲ್ವಿಚಾರಕರಿಗೆ ಮತ್ತು ತಾಲ್ಲೂಕು ಮಟ್ಟದಲ್ಲಿ ಗಣತಿ ಕಾರ್ಯ ಕೈಗೊಳ್ಳುವ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಗಣತಿ ಕಾರ್ಯ ವಿಧಾನದ ಕುರಿತು ಸೂಕ್ತ ತರಬೇತಿ ಹೊಂದಬೇಕು ಎಂದು ತಿಳಿಸಿದರು.
ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಅವರು ಮಾತನಾಡಿದರು. ಬಳಿಕ ಗಣತಿ ಕಾರ್ಯದ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಆರ್.ವೆಂಕಟೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಇಂಧುದರ, ಕೃಷಿ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.