ಬಳ್ಳಾರಿ | ಈಶಾನ್ಯ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ಪ್ರಕ್ರಿಯೆ ಆರಂಭ
ಬಳ್ಳಾರಿ : ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಈ ಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಯೂ ಆಗಿರುವ ಜಹೀರಾ ನಸೀಮ್ ಅವರು, ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಪ್ರಚಾರ ಹಾಗೂ ಸ್ವೀಪ್ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದರು.
ಶುಕ್ರವಾರ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಡಿಸಿ ಮತ್ತು ರಾಜಕೀಯ ಪಕ್ಷದ ಮುಖಂಡರೊಂದಿಗೆ ಮಾಹಿತಿ ಹಂಚಿಕೊಂಡರು. 11.11.2026 ರಂದು ಈ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಪದಾವಧಿ ಮುಕ್ತಾಯವಾಗಲಿದೆ. ಈ ಮೂಲಕ ಅರ್ಹ ಶಿಕ್ಷಕರು ತಮ್ಮ ಹೆಸರನ್ನು ನೂತನ ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕಾಗಿದೆ.
ಅರ್ಜಿ ನಮೂನೆ 19 ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ವೇಳೆ ತಪ್ಪು ಮಾಹಿತಿ ನೀಡಬಾರದು. ಯೋಜನೆಯಡಿಯಲ್ಲಿ ಸ್ವೀಪ್ ಚಟುವಟಿಕೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ನೋಂದಣಿಯನ್ನು ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಸ್ವೀಪ್ ಸಮಿತಿಗಳನ್ನು ರಚಿಸಲಾಗಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ, ಕನಿಷ್ಠ 30 ಮತದಾರರನ್ನು ಹೊಂದಿರುವ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಆಯಾ ಜಿಲ್ಲೆಗಳ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ, ಅಪರ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಡಿಡಿಪಿಯು, ಡಿಡಿಪಿಐ, ಬಿಇಓ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.