ಬಳ್ಳಾರಿ | ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು: ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ : ಗರ್ಭಿಣಿ ಮಹಿಳೆಯರು ಹಾಗೂ ತಾಯಂದಿರು ತಮ್ಮ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸಬೇಕು. ಗರ್ಭಾವಸ್ಥೆಯಲ್ಲಿ ರಕ್ತಹೀನತೆ ತಡೆಯಲು ಪೌಷ್ಟಿಕ ಆಹಾರ ಹಾಗೂ ಕಬ್ಬಿಣಾಂಶದ ಮಾತ್ರೆಯನ್ನು ನಿಯಮಿತವಾಗಿ ಸೇವಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ” ಹಾಗೂ ಎಂಟನೇ ಪೋಷಣ್ ಮಾಸಾಚರಣೆ ಅಂಗವಾಗಿ ಮಂಗಳವಾರ ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಗರ್ಭಿಣಿಯರು ಹಾಗೂ ತಾಯಂದಿರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಬೇಕು. ಹದಿಹರೆಯದ ಹೆಣ್ಣುಮಕ್ಕಳು ಸಕಾಲದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು,” ಎಂದು ಅವರು ಸಲಹೆ ನೀಡಿದರು.
ತಾಯಂದಿರು ಮಕ್ಕಳಿಗೆ ಜನನದ ಆರು ತಿಂಗಳ ಬಳಿಕ ತಾಯಿಯ ಎದೆಹಾಲಿನ ಜೊತೆಗೆ ಪೂರಕ ಆಹಾರ ನೀಡದಿದ್ದರೆ, ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಡಾ. ರಮೇಶ್ ಬಾಬು ಎಚ್ಚರಿಸಿದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶ ಪೂರೈಸಲು ಆಯುಷ್ಮಾನ್ ಆರೋಗ್ಯ ಮಂದಿರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗುತ್ತಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಪ್ರತಿ ತಿಂಗಳ ಮೂರನೇ ಶನಿವಾರ ನಡೆಯುವ ಗ್ರಾಮ ಆರೋಗ್ಯ ಪೌಷ್ಠಿಕ ದಿನಾಚರಣೆಯಲ್ಲಿ ಸ್ಥಳೀಯ ತರಕಾರಿಗಳಿಂದ ತಯಾರಿಸಬಹುದಾದ ಪೌಷ್ಟಿಕ ಆಹಾರ ಕುರಿತು ತಾಯಂದಿರಿಗೆ ತಿಳಿಸಲು ಸೂಚಿಸಲಾಯಿತು. ಆಶಾಕಾರ್ಯಕರ್ತೆಯರು ಪೋಷಣ್ ಮಾಸಾಚರಣೆ ಅಂಗವಾಗಿ ವಿವಿಧ ಪೌಷ್ಠಿಕ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಭಾರತಿ, ಪ್ರಸೂತಿ ತಜ್ಞೆ ಡಾ. ವಿಜಯಲಕ್ಷ್ಮಿ, ಎನ್‌ಸಿಡಿ ವೈದ್ಯೆ ಡಾ. ಸಿಂಧು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಕಚೇರಿ ಅಧೀಕ್ಷಕ ವೆಂಕಟಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್.ವಿ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ತಾಯಂದಿರು ಉಪಸ್ಥಿತರಿದ್ದರು.