ಬಳ್ಳಾರಿ | ಕೆಪಿಎಸ್ ಮ್ಯಾಗ್ನೆಟ್ ನೀತಿ ವಿರೋಧಿಸಿ ಪ್ರತಿಭಟನೆ
ಕುರುಗೋಡು: ಸರಕಾರಿ ಶಾಲೆಗಳನ್ನು ವಿಲೀನಗೊಳಿಸುವ ಹಾಗೂ ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ ಕೆಪಿಎಸ್ ಮ್ಯಾಗ್ನೆಟ್ ನೀತಿಯನ್ನು ವಿರೋಧಿಸಿ, ಪಟ್ಟಣ ಸಮೀಪದ ಕೋಳೂರು ಗ್ರಾಮದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನೆಪದಲ್ಲಿ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಜೊತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದವನ್ನು ಕೂಡಲೇ ರದ್ದುಪಡಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟು ಬಡ ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣದಿಂದ ವಂಚಿಸುವ ಹುನ್ನಾರ ನಡೆದಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್ಒ ಜಿಲ್ಲಾ ಖಜಾಂಚಿ ಅನುಪಮಾ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮತ್ತು ಕೆಪಿಎಸ್ ಮ್ಯಾಗ್ನೆಟ್ ಯೋಜನೆಗಳು ಶಿಕ್ಷಣದ ಮೂಲ ಆಶಯಕ್ಕೆ ಧಕ್ಕೆ ತರುತ್ತಿವೆ. ಉಳ್ಳವರಿಗೆ ಒಂದು ಹಾಗೂ ಇಲ್ಲದವರಿಗೆ ಮತ್ತೊಂದು ಬಗೆಯ ಶಿಕ್ಷಣ ನೀಡುವ ಮೂಲಕ ಸರ್ಕಾರ ತಾರತಮ್ಯ ಎಸಗುತ್ತಿದೆ. ವೃತ್ತಿಪರ ಶಿಕ್ಷಣದ ಹೆಸರಿನಲ್ಲಿ ಕಾರ್ಖಾನೆಗಳಿಗೆ ಬೇಕಾದ ಕಾರ್ಮಿಕರನ್ನು ಸೃಷ್ಟಿಸಲು ಹೊರಟಿದೆ. ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಟ್ಟು, ಮೂಲಸೌಕರ್ಯ ಒದಗಿಸಿ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಎಂ. ಶಾಂತಿ ಮಾತನಾಡಿ, ಖಾಸಗಿ ಸಂಸ್ಥೆಗಳು ಶೈಕ್ಷಣಿಕ ಕಾಳಜಿಯಿಂದ ಬರುವುದಿಲ್ಲ. ಬದಲಿಗೆ ಸರ್ಕಾರಿ ಶಾಲೆಗಳ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಕಬಳಿಸುವ ಹುನ್ನಾರ ಹೊಂದಿವೆ. ಸರ್ಕಾರವು ಶಾಲೆಗಳನ್ನು ಮುಚ್ಚಲು ಒತ್ತಡ ಹೇರುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಸಂಘಟಿತ ಹೋರಾಟ ನಡೆಸಬೇಕು ಎಂದರು.
ಈ ವೇಳೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯ ನಾಗರಾಜ, ಎಐಡಿಎಸ್ಒ ಸದಸ್ಯ ಕಂಬಳಿ ಮಂಜುನಾಥ, ಸಮಿತಿಯ ಸದಸ್ಯರಾದ ಭೀಮೇಶಪ್ಪ, ಶೇಖರ್, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.