ಬಳ್ಳಾರಿ | ಝಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹೊಸಪೇಟೆ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಡಾ.ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿ, ರಸ್ತೆ ಮಧ್ಯೆ ಕುಳಿತು ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗಾಳೆಪ್ಪ ಮಾತನಾಡಿ, "ಝಮೀರ್ ಅಹ್ಮದ್ ಖಾನ್ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಎಲ್ಲಾ ವರ್ಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ನಾಯಕ. ವಿಜಯನಗರ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ" ಎಂದು ಹೇಳಿದರು.
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಹಾನಿಗೊಳಗಾದ ಸಂದರ್ಭದಲ್ಲಿ ಝಮೀರ್ ಅಹ್ಮದ್ ಖಾನ್ ತಕ್ಷಣ ಸ್ಪಂದಿಸಿ ರೈತರ ನೆರವಿಗೆ ಧಾವಿಸಿದ್ದರು. ಹೊಸ ಗೇಟ್ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ್ದಲ್ಲದೆ, ರಾಜ್ಯ ಸರಕಾರದ ಅನುದಾನದೊಂದಿಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರಕಾರಗಳೊಂದಿಗೆ ಸಮನ್ವಯ ಸಾಧಿಸಿ ದುರಸ್ತಿ ಕಾರ್ಯವನ್ನು ವೇಗವಾಗಿ ಪೂರ್ಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಗಾಳೆಪ್ಪ ತಿಳಿಸಿದರು.
ಗೇಟ್ ದುರಸ್ತಿ ಕಾರ್ಯ ಪೂರ್ಣಗೊಂಡ ಪರಿಣಾಮ ರೈತರಿಗೆ ಎರಡು ಬೆಳೆಗಳಿಗೆ ಅಗತ್ಯವಿರುವ ನೀರು ಲಭ್ಯವಾಗುತ್ತಿದೆ. ಕೃಷಿ ಚಟುವಟಿಕೆಗಳು ಸುಗಮವಾಗಿ ನಡೆಯಲು ಝಮೀರ್ ಅವರ ಪ್ರಯತ್ನಗಳು ಕಾರಣವಾಗಿವೆ. ಇಂತಹ ಜನಪರ ಹಾಗೂ ಅಭಿವೃದ್ಧಿ ಪರ ನಾಯಕರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದೆ ಎಂದು ರೈತರು ಅಭಿಪ್ರಾಯಪಟ್ಟರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಮತ್ತು ಸಂಘಟನೆಯ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಗಮನ ಸೆಳೆಯುವ ಉದ್ದೇಶದಿಂದ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಯನ್ನು ಸರಕಾರದ ಮುಂದೆ ಮಂಡಿಸಿದರು. ಝಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೆಲಕಾಲ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೂ, ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.
ಝಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ. ತುಂಗಭದ್ರಾ ಕ್ರಸ್ಟ್ ಗೇಟ್ ಸಮಸ್ಯೆ ಸಂದರ್ಭದಲ್ಲಿ ರೈತರ ಪರ ನಿಂತು ಪರಿಹಾರ ಕಲ್ಪಿಸಿದವರು. ಅಂತಹ ಅಭಿವೃದ್ಧಿ ಪರ ನಾಯಕನಿಗೆ ಸಚಿವ ಸ್ಥಾನ ನೀಡುವುದರ ಜೊತೆಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಬೇಕು ಎಂದು ರಾಜ್ಯ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಗಾಳೆಪ್ಪ ಹೇಳಿದರು.