ಬಳ್ಳಾರಿ | ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು: ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ
ಬಳ್ಳಾರಿ,ಆ.19 : ಗ್ರಾಮೀಣ ಮಹಿಳೆಯರು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಿ ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಹೇಳಿದರು.
ಕೌಶಲ್ಯ ಅಭಿವೃದ್ಧಿ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್ ಹಾಗೂ ಜಿಲ್ಲಾ ಅಭಿಯಾನ ಘಟಕ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗ್ರಾಮೀಣ ಸಮೃದ್ಧಿ ಸತೀಸ್ಥಾಪಕ ಯೋಜನೆ ಕುರಿತು ತಾಲ್ಲೂಕು ಮಟ್ಟದ ಸಿಬ್ಬಂದಿಗಳಿಗೆ ಜಿಪಂ ನಜೀರ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಸಮೃದ್ಧಿ ಸ್ಥಿತಿ ಸ್ಥಾಪಕ ಯೋಜನೆಯಡಿ ಬಡ ಮಹಿಳೆಯರಿಗೆ ಇಲಾಖೆಯ ಯೋಜನೆಗಳನ್ನು ಯಾವ ರೀತಿ ತಲುಪಿಸಬೇಕು ಎನ್ನುವುದರ ಕುರಿತು ತರಬೇತಿ ನೀಡಲಾಗುತ್ತದೆ. ಬಡ ಮಹಿಳೆಯರಿಗೆ ಪರಿಪೂರ್ಣವಾಗಿ ಅಭಿವೃದ್ಧಿಪಡಿಸಲು ಶ್ರಮಿಸಬೇಕು ಎಂದು ತಾಲ್ಲೂಕು ಮಟ್ಟದ ಸಂಜೀವಿನಿ ಸಿಬ್ಬಂದಿಗಳಿಗೆ ತಿಳಿಸಿದರು.
ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನು ತೆಗೆದುಕೊಂಡು ವಿನೂತನವಾದ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಸಹಾಯಕ ನಿರ್ದೇಶಕ (ಆಡಳಿತ) ಬಸವರಾಜ ಹಿರೇಮಠ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ರಾಜೇಂದ್ರ, ವಿಜಯಕುಮಾರ್, ಜಿಲ್ಲಾ ವ್ಯವಸ್ಥಾಪಕ ರಘುವರ್ಮ, ಡಿಎಂಐಎಸ್ ಮಾರೇಶ್ ಸೇರಿದಂತೆ ಜಿಲ್ಲಾಮಟ್ಟದ ಸಿಬ್ಬಂದಿಗಳು ಹಾಗೂ ತಾಲ್ಲೂಕು ಮಟ್ಟದ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.