ಬಳ್ಳಾರಿ | ಹಿರಿಯ ನಾಗರಿಕರು ಸಮಾಜದ ಬೇರುಗಳು : ರಾಜೇಶ್ ಎನ್.ಹೊಸಮನೆ
ಬಳ್ಳಾರಿ : ಹಿರಿಯ ನಾಗರಿಕರು ಸಮಾಜದ ಬೇರುಗಳು. ಒಂದು ದೇಶ ಅಥವಾ ರಾಜ್ಯ ಅಭಿವೃದ್ಧಿಯಾಗಲು ಅವರ ಮಾರ್ಗದರ್ಶನ ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವು ವಿಶ್ವಸಂಸ್ಥೆಯ ಘೋಷವಾಕ್ಯ “ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಹಾಗೂ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು” ಎಂಬ ತತ್ವದಡಿ ನಡೆಯಿತು.
ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುವ ಪ್ರವೃತ್ತಿ ವಿಷಾದನೀಯವಾಗಿದೆ. ಅವರನ್ನು ಗೌರವದಿಂದ ಕಾಣಬೇಕು, ಕಾಳಜಿ ವಹಿಸಬೇಕು ಹಾಗೂ ಒಂಟಿತನ ಕಾಡದಂತೆ ನೋಡಿಕೊಳ್ಳಬೇಕು. ಹಿರಿಯ ನಾಗರಿಕರಿಗೆ ಯಾವುದೇ ಕಾನೂನು ಸಂಬಂಧಿತ ಸಮಸ್ಯೆಗಳಿದ್ದರೆ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, ಹಿರಿಯ ನಾಗರಿಕರ ಅನುಭವದಿಂದಲೇ ದೇಶ ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗುತ್ತಿದೆ. ನಮ್ಮ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಇಬ್ಬರೂ ಹಿರಿಯ ನಾಗರಿಕರಾಗಿದ್ದು, ಅವರ ಮಾರ್ಗದರ್ಶನ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶತಾಯುಷಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಾಯಿತು. ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ವಿವಿಧ ಸಹಾಯಕ ಸಾಧನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಸವಿತಾ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಟಿ. ಮಲ್ಲೇಶ್, ಹಿರಿಯ ಸಾಹಿತಿ ಡಿ. ವೆಂಕಮ್ಮ, ಹಾಗೂ ಸ್ಮೈಲ್ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಅನೇಕ ಹಿರಿಯ ನಾಗರಿಕರು ಉಪಸ್ಥಿತರಿದ್ದರು.