ಬಳ್ಳಾರಿ ಪಾದಯಾತ್ರೆ ಸಮಾರೋಪಕ್ಕೆ ಅನುಮತಿ ವಿಳಂಬ ಆರೋಪ | ಜಿಲ್ಲಾಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿಯಬಾರದು: ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ
ಸಂಡೂರು (ಬಳ್ಳಾರಿ) : ಬಳ್ಳಾರಿಯಲ್ಲಿ ಬಿಜೆಪಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಅನುಮತಿ ನೀಡುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದ ಒತ್ತಡದಲ್ಲಿರುವಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿದರು.
ಶಾಂತಿಯುತವಾಗಿ ನಡೆಯುತ್ತಿರುವ ಈ ಪಾದಯಾತ್ರೆಯನ್ನು ಇಡೀ ರಾಜ್ಯ ಮತ್ತು ದೇಶದ ಜನರು ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ. ಇದು ಜನಪರ ಹೋರಾಟವಾಗಿದ್ದು, ಜಿಲ್ಲಾಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿಯದೇ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
“ಯಾಕೆ ಅನುಮತಿ ನೀಡುವುದಿಲ್ಲ? ನಾನೂ ನೋಡುತ್ತೇನೆ. ಕೊಟ್ಟೇ ಕೊಡುತ್ತಾರೆ,” ಎಂದು ವಿಜಯೇಂದ್ರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.