ಸಂಡೂರು ಕ್ಷೇತ್ರದಲ್ಲಿ 10.43 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಶಾಸಕಿ ಅನ್ನಪೂರ್ಣ ತುಕಾರಾಂ, ಸಂಸದ ಈ.ತುಕಾರಾಂರಿಂದ ಉದ್ಘಾಟನೆ
ಸಂಡೂರು/ಬಳ್ಳಾರಿ : ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ 10.43 ಕೋಟಿ ರೂ. (1,042.90 ಲಕ್ಷ ರೂ.) ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಶಾಸಕಿ ಅನ್ನಪೂರ್ಣ ತುಕಾರಾಂ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಂ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಲಾ ಕೊಠಡಿಗಳು, ರಸ್ತೆ, ಒಳಚರಂಡಿ, ಸಮುದಾಯ ಭವನ, ಹೈಮಾಸ್ಟ್ ದೀಪ, ಬಸ್ ನಿಲ್ದಾಣ ಹಾಗೂ ಕೆರೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ತ್ಯಾಗದಾಳ್ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ಹೊಸ ಕೊಠಡಿಗಳನ್ನು ಉದ್ಘಾಟಿಸಲಾಯಿತು. ಯರಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹೈಮಾಸ್ಟ್ ದೀಪ ಅಳವಡಿಕೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಸ್ವಾಮಿಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಲಾಯಿತು.
ತೋಣಸಿಗೆರೆಯಲ್ಲಿ 1.50 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಉದ್ಘಾಟನೆಯಾಗಿದ್ದು, 2.50 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಬೀದಿ ದೀಪ ಅಳವಡಿಕೆ ಕಾಮಗಾರಿಗೂ ಚಾಲನೆ ನೀಡಲಾಯಿತು. ನಾಗೇನಹಳ್ಳಿ ಹಾಗೂ ಯರದಮ್ಮನಹಳ್ಳಿ ಸರ್ಕಾರಿ ಶಾಲೆಗಳ ಹೊಸ ಕೊಠಡಿಗಳನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಯಿತು.
ಮತ್ತಜನಹಳ್ಳಿ ಎಸ್.ಟಿ. ಕಾಲೋನಿಯಲ್ಲಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಲಾಗಿದ್ದು, ಶೆಲಿಯಪ್ಪನಹಳ್ಳಿ ಮತ್ತು ದೇವರಬುಡೇನಹಳ್ಳಿಯಲ್ಲಿ ಎನ್‌ಎಂಡಿಸಿ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣಗಳನ್ನು ಉದ್ಘಾಟಿಸಲಾಯಿತು.
ದೇವರಬುಡೇನಹಳ್ಳಿಯಲ್ಲಿ ಡಿಎಂಎಫ್ ಯೋಜನೆಯಡಿ 3 ಕೋಟಿ ರೂ. ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕಿ ಹಾಗೂ ಸಂಸದರು, ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಆರ್‌ಐಡಿಎಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆಕೆಆರ್‌ಡಿಬಿ, ಡಿಎಂಎಫ್ ಹಾಗೂ ಎನ್‌ಎಂಡಿಸಿ ಸಿಎಸ್‌ಆರ್ ಸೇರಿದಂತೆ ವಿವಿಧ ಇಲಾಖೆಗಳ ಅನುದಾನದಲ್ಲಿ ಈ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.