ಬಳ್ಳಾರಿ ವಲಯದ ನೂತನ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ
Update: 2026-01-07 17:52 IST
ಬಳ್ಳಾರಿ : ಬಳ್ಳಾರಿ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಅಧಿಕಾರ ಸ್ವೀಕಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ದೃಢವಾದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಬಳ್ಳಾರಿ ವಲಯದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಪ್ರಮುಖ ಹಾಗೂ ಶಾಂತಿಪ್ರಿಯ ಜಿಲ್ಲೆಗಳಾಗಿದ್ದು, ಈ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ಜನಸ್ನೇಹಿ ಪೊಲೀಸ್ ಆಡಳಿತ ನೀಡಲು ಪೊಲೀಸ್ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು.