ಸಿರುಗುಪ್ಪ: ತಾಲ್ಲೂಕಿನ ಕರೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ರೈತ ಸಂಪರ್ಕ ಕೇಂದ್ರವನ್ನು ಶಾಸಕ ಬಿ.ಎಂ. ನಾಗರಾಜ್ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಕೇಂದ್ರದ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಪ್ರಮಾಣಿತ ಬಿತ್ತನೆ ಬೀಜಗಳು, ಸಸ್ಯ ಸಂರಕ್ಷಣಾ ಪರಿಕರಗಳು, ಮಣ್ಣು ಆರೋಗ್ಯ ಚೀಟಿ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗಲಿವೆ. ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಹಾಗೂ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚಿನ ಆದಾಯ ಗಳಿಸಲು ಮುಂದಾಗಬೇಕು ಎಂದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಕೆ. ಸೋಮಸುಂದರ್ ಮಾತನಾಡಿ, ಕೃಷಿ ಇಲಾಖೆಯ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಸಹಾಯಧನ ಹಾಗೂ ತಾಂತ್ರಿಕ ಸೇವೆಗಳನ್ನು ರೈತರಿಗೆ ಸ್ಥಳೀಯವಾಗಿ ಒದಗಿಸುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಉಪ ಕೃಷಿ ನಿರ್ದೇಶಕ ಎನ್. ಮಂಜುನಾಥ್ ಮಾತನಾಡಿ, ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿ ಚಟುವಟಿಕೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ರಿಯಾಯಿತಿ ದರದಲ್ಲಿ ಬಾಡಿಗೆ ಆಧಾರದ ಮೇಲೆ ಪಡೆಯಬಹುದು. ಯೋಜನೆ ಹಾಗೂ ಸೌಲಭ್ಯಗಳ ಕುರಿತು ಸಮರ್ಪಕ ಮಾಹಿತಿ ನೀಡಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ರೆಡ್ಡಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್, ಕೃಷಿ ಅಧಿಕಾರಿಗಳಾದ ಪುರುಷೋತ್ತಮ್ ವೈ., ಪರಮೇಶ್ವರ ರೆಡ್ಡಿ, ಬಾಲಾಜಿ ನಾಯಕ್, ಜಿಕೆವಿಕೆ ತಾಂತ್ರಿಕ ಅಧಿಕಾರಿ ಕುಲ್ಸುಂಬಿ ಕೆ. ಸಿದ್ದೇಶ್ವರ, ಆತ್ಮ ಸಿಬ್ಬಂದಿ ಹಾಗೂ ರೈತ ಮುಖಂಡರಾದ ಪಿ. ರಂಗಾರೆಡ್ಡಿ, ಹುಲುಗಪ್ಪ, ಈರಪ್ಪಯ್ಯ, ದೇವರೆಡ್ಡಿ, ರುದ್ರಮುನಿಸ್ವಾಮಿ, ಈರಯ್ಯಸ್ವಾಮಿ, ಪ್ರತಾಪ್ ರೆಡ್ಡಿ ಸೇರಿದಂತೆ ಹಲವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor