ಕಂಪ್ಲಿಯಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ
ಬಳ್ಳಾರಿ/ಕಂಪ್ಲಿ, ಜು.1: ಪಟ್ಟಣದ ಗೊಗ್ಗ ಚನ್ನಬಸಯ್ಯ ಐಟಿಐ ಕಾಲೇಜು ಹಾಗೂ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಸ್ಥಳೀಯ ಕಾರ್ಯಕ್ರಮವನ್ನು ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎಂ. ನಾಗರಾಜ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪ್ರತಿವರ್ಷ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಮಧ್ಯವರ್ಜನ ಶಿಬಿರ ಹಾಗೂ ಸ್ವಾಸ್ಥ್ಯ ಸಂಕಲ್ಪ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆಯೋಜಿಸುತ್ತಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯದ ಸುಮಾರು 1,000 ಶಾಲೆ-ಕಾಲೇಜುಗಳ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಬೀರುವ ಪರಿಣಾಮ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಡಿ. ವೀರಪ್ಪ, ವಾಗೀಶ್, ಬಸವರಾಜ, ಡಾ. ವೆಂಕಟೇಶ್ ಬರಮಕ್ಕನವರ್, ರಾಮಾಂಜನೇಯಲು, ಉಮಾಮಹೇಶ್ವರಿ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಕೃಷಿ ಅಧಿಕಾರಿ ಸಂಜುಕುಮಾರ್, ವಲಯ ಮೇಲ್ವಿಚಾರಕ ಮಂಜುನಾಥ್, ಕಚೇರಿ ಪ್ರಬಂಧಕ ರಾಜೇಶ್, ಸೇವಾದಾರರಾದ ದರ್ಶನ್ ಮತ್ತು ಮಲ್ಲಿಕಾರ್ಜುನ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.