ಕಂಪ್ಲಿ | ಅರಳಿಹಳ್ಳಿ ತಾಂಡದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ತಾಂಡ ಅಭಿವೃದ್ಧಿ ನಿಗಮದಿಂದ ಮೂಲಸೌಕರ್ಯ ವೃದ್ಧಿಗೆ ಒತ್ತು
Update: 2026-07-09 19:48 IST
ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಹಳ್ಳಿ ತಾಂಡದಲ್ಲಿ 2026-27ನೇ ಸಾಲಿನ ತಾಂಡ ಅಭಿವೃದ್ಧಿ ನಿಗಮದ ಸುಮಾರು 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಮುಖಂಡರು ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಮುಖಂಡ ಕೆ. ಲಿಂಗಪ್ಪ, ಅರಳಿಹಳ್ಳಿ ತಾಂಡದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಇದೀಗ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ದೊರೆತಿರುವುದು ತಾಂಡದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕ್ಷೇತ್ರದಲ್ಲಿ ಜನಪರ ಸೇವೆಯೊಂದಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪೇಂಟರ್ ಮಸ್ತಾನ್, ಎ.ಕೆ. ಗವಿಸಿದ್ದಪ್ಪ, ಇಟಗಿ ವಿರೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.