ಕಂಪ್ಲಿ: ಪಾಲಕರು ಮತ್ತು ಶಿಕ್ಷಕರು ಮಕ್ಕಳ ಸಾಮರ್ಥ್ಯಕ್ಕೆ ಪೂರಕವಾದ ವಾತಾವರಣ ನಿರ್ಮಿಸಿದರೆ, ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಉಪಪ್ರಾಚಾರ್ಯೆ ಸುಜಾತ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮೆಟ್ರಿ ಗ್ರಾಮದ ಪಿಎಂಶ್ರೀ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮೆಟ್ರಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕ್ರಿಯಾಶೀಲರು ಹಾಗೂ ಚುರುಕಾಗಿರುತ್ತಾರೆ. ಹಿಂಜರಿಕೆಯಿಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ಮುಕ್ತವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಆರ್‌ಪಿ ಪ್ರಭಾಕರ, ಮಕ್ಕಳನ್ನು ಕೇವಲ ಮೊಬೈಲ್ ಮತ್ತು ಇಂಟರ್‌ನೆಟ್ ಜ್ಞಾನಕ್ಕೆ ಸೀಮಿತಗೊಳಿಸದೆ, ಅವರಿಗೆ ಮುಕ್ತ ಸಮಾಜದ ವಾಸ್ತವಿಕ ಅನುಭವವನ್ನೂ ನೀಡಬೇಕು. ಪಾಲಕರು ಸಾಂಪ್ರದಾಯಿಕ ಮೌಲ್ಯಗಳನ್ನು ಉಳಿಸಿಕೊಂಡು, ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಬೇಕು ಎಂದರು.

ಸಮಾರಂಭದಲ್ಲಿ ನಡೆದ ಛದ್ಮವೇಷ, ನಾಟಕ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಎಚ್. ನಾಗರಾಜ, ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಚಾರ ಸಮಿತಿ ಸದಸ್ಯ ಎಚ್.ಪಿ. ಸೋಮಶೇಖರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಜಿಪಿಟಿ ಅಧ್ಯಕ್ಷ ಮಂಜುನಾಥ, ಇಸಿಒ ಎಂ. ರೇವಣ್ಣ, ಸಿಆರ್‌ಪಿಗಳಾದ ಎ. ಗಂಗಾಧರ, ಎ.ಎಸ್. ಭೂಮೇಶ್ವರ, ಕರುಣಾಕರ, ರೇಣುಕಾರಾಧ್ಯ, ಪ್ರಭಾರಿ ಮುಖ್ಯಶಿಕ್ಷಕಿ ರೇಖಾ, ಗ್ರಾಮದ ಮುಖಂಡರಾದ ಎಚ್. ಕುಮಾರಸ್ವಾಮಿ, ಶಂಕರ್, ಹರಿಜನ ಜಗದೀಶ, ಮಲ್ಲಯ್ಯ, ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ