ಕಂಪ್ಲಿ: ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಅಸ್ಮಿತೆಯಾಗಿದೆ. ತಾಯ್ನುಡಿಯ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜೊತೆಗೆ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಬಳ್ಳಾರಿ ಜಿಲ್ಲೆ ಕನ್ನಡ ಹಿತರಕ್ಷಕ ಸಂಘವು ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.

ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ವೀರಶೈವ ಸಂಘದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಲೂಕಿನ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಿರುವುದು ಕಂಪ್ಲಿ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೂ ಗೌರವ ಸಲ್ಲಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಬಿಂಬಿಸಿದವು.

ಕಾರ್ಯಕ್ರಮದಲ್ಲಿ ತಾಲೂಕು ವೀರಶೈವ ಸಂಘದ ಅಧ್ಯಕ್ಷ ಎಸ್.ಎಂ. ನಾಗರಾಜ ಸ್ವಾಮಿ, ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ್, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಕನ್ನಡ ಹಿತರಕ್ಷಕ ಸಂಘದ ಅಧ್ಯಕ್ಷ ಬೂದುಗುಂಪಿ ಅಂಬಣ್ಣ, ಗೌರವ ಅಧ್ಯಕ್ಷ ಕ.ಮ. ಹೇಮಯ್ಯ ಸ್ವಾಮಿ, ಕಾರ್ಯದರ್ಶಿ ಸಿ. ಯಂಕಪ್ಪ, ಉಪ ಕಾರ್ಯದರ್ಶಿ ಮೆಹಬೂಬ್, ಖಜಾಂಚಿ ಶ್ರೀನಿವಾಸ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor