Kampli | ಶಾಮೀಯಾಚಂದ್ ಸರ್ಕಾರಿ ಪ್ರೌಢಶಾಲೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನಕ್ಕೆ ಮನವಿ
ಕಂಪ್ಲಿ: ಬ್ರಿಟಿಷರ ಕಾಲದ ಐತಿಹಾಸಿಕ ಹಿನ್ನೆಲೆಯುಳ್ಳ ಪಟ್ಟಣದ ಶಾಮೀಯಾಚಂದ್ ಸರ್ಕಾರಿ ಪ್ರೌಢಶಾಲೆಯ ಜೀರ್ಣೋದ್ಧಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ 50 ಲಕ್ಷ ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ, ಕ್ಷೇತ್ರದ ಶಿಕ್ಷಣ ಸುಧಾರಣಾ ಸಮಿತಿಯ ನಾಮನಿರ್ದೇಶಿತ ಸದಸ್ಯ ಹೆಚ್. ಕುಮಾರಸ್ವಾಮಿ ಅವರ ನೇತೃತ್ವದ ತಂಡವು ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್. ಕುಮಾರಸ್ವಾಮಿ, ಶಾಮೀಯಾಚಂದ್ ಶಾಲೆಯು ಕಂಪ್ಲಿ ಪಟ್ಟಣದ ಶೈಕ್ಷಣಿಕ ಹೆಮ್ಮೆಯ ಸಂಕೇತವಾಗಿದೆ. ಸಾವಿರಾರು ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾಗಿರುವ ಈ ಶಾಲೆಯ ಕಟ್ಟಡ ಪ್ರಸ್ತುತ ಶಿಥಿಲಾವಸ್ಥೆಯಲ್ಲಿದ್ದು, ಮೂಲಸೌಕರ್ಯಗಳ ಕೊರತೆಯೂ ಇದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಟ್ಟಡದ ಜೀರ್ಣೋದ್ಧಾರ ತುರ್ತಾಗಿ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರು 50 ಲಕ್ಷ ರೂ. ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಶಾಸಕರು ನಮ್ಮ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.