ಕಂಪ್ಲಿ: ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇಲ್ಲದ ಕಾರಣ ಎಸೆಸೆಲ್ಸಿ ನಂತರ ಹೆಣ್ಣುಮಕ್ಕಳನ್ನು ದೂರದ ನಗರಗಳಿಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಹೆಣ್ಣುಮಕ್ಕಳು ಬಾಲ್ಯವಿವಾಹಕ್ಕೆ ತುತ್ತಾಗಿ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಕೂಡಲೇ ಗ್ರಾಮದಲ್ಲಿ ಪಿಯು ಕಾಲೇಜು ಆರಂಭಿಸಬೇಕು ಎಂದು ದೇವಲಾಪುರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಾಸಕ ಜೆ.ಎನ್. ಗಣೇಶ್ ಅವರಿಗೆ ಮನವಿ ಮಾಡಿದರು.

ತಾಲ್ಲೂಕಿನ ದೇವಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಈ ಹಕ್ಕೊತ್ತಾಯ ಮಂಡಿಸಿದರು. ಪ್ರೌಢಶಾಲೆಗೆ ತಡೆಗೋಡೆ (ಕಾಂಪೌಂಡ್) ನಿರ್ಮಿಸುವುದರ ಜೊತೆಗೆ ಶುದ್ಧ ಕುಡಿಯುವ ನೀರು ಹಾಗೂ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದೂ ಕೋರಿದರು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಜೆ.ಎನ್. ಗಣೇಶ್, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಗ್ರಾಮದಲ್ಲಿ ಪಿಯು ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಸಚಿವರ ಗಮನಕ್ಕೆ ತಂದು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಜೆ.ಎನ್. ಗಣೇಶ್, ನೀರಾವರಿ, ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಈ ವಿಚಾರದಲ್ಲಿ ಬಿಜೆಪಿಯ ಕೊಡುಗೆ ಶೂನ್ಯ. ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ ಎಂದರು.

ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ಪಂಚ ಗ್ಯಾರಂಟಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಅಧಿಕಾರಿಗಳು ಸಕಾಲದಲ್ಲಿ ಜನರಿಗೆ ತಲುಪಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಆರ್‌ಡಿಪಿಆರ್ ಇಲಾಖೆಗೆ 106, ಕಂದಾಯ ಇಲಾಖೆಗೆ 4, ಜೆಸ್ಕಾಂ (ಕೆಇಬಿ)ಗೆ 2 ಹಾಗೂ ಕೃಷಿ, ನೀರಾವರಿ, ಕಾರ್ಮಿಕ ಮತ್ತು ಅಬಕಾರಿ ಇಲಾಖೆಗೆ ತಲಾ ಒಂದು ಅರ್ಜಿಯಂತೆ ಒಟ್ಟು 116 ಅರ್ಜಿಗಳು ಸಲ್ಲಿಕೆಯಾದವು. ಕೆಲವು ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಯಿತು. ಫಲಾನುಭವಿಗಳಿಗೆ ವೃದ್ಧಾಪ್ಯ ವೇತನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್, ತಾ.ಪಂ. ಇಒ ಆರ್.ಕೆ. ಶ್ರೀಕುಮಾರ್, ಎಇಇ ಶ್ರೀನಿವಾಸ ಪ್ರಸಾದ್, ಗ್ರಾಮ ಆಡಳಿತಾಧಿಕಾರಿ ಅಬ್ದುಲ್, ಪಿಡಿಒ ಮಲ್ಲಿಕಾರ್ಜುನ, ಮುಖ್ಯಶಿಕ್ಷಕರಾದ ನಂದಕಿಶೋರ ಹಾಗೂ ಎಚ್.ಪಿ. ಸೋಮಶೇಖರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ