ಬಳ್ಳಾರಿ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ನವೆಂಬರ್ 25ರಂದು ಜಿಲ್ಲಾದ್ಯಂತ ವಿವಿಧೆಡೆ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, ಒಟ್ಟು 5,000 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಆರ್. ಮಳಗಿ ತಿಳಿಸಿದರು.

ನಗರದ ಡಿಎಚ್‌ಒ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಬಿರದ ಯಶಸ್ಸಿಗೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಕ್ರಿಯವಾಗಿ ಶ್ರಮಿಸಬೇಕು ಎಂದರು. ಆಯ್ದ ಪ್ರತಿ ತಂಡಕ್ಕೆ ತಲಾ 250 ಯೂನಿಟ್ ರಕ್ತ ಸಂಗ್ರಹಿಸುವ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಖಾಸಗಿ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಗರದ ವಾರ್ಡ್‌ಗಳು ಮತ್ತು ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸಬೇಕು. ಶಿಬಿರದ ಸ್ಥಳಗಳಲ್ಲಿ ಅಗತ್ಯ ಸಲಕರಣೆಗಳು, ಸಿಬ್ಬಂದಿ ನಿಯೋಜನೆ ಹಾಗೂ ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಿಯೋಜಿತ ಸಿಬ್ಬಂದಿ ನಿಗದಿತ ಸಮಯಕ್ಕೆ ಸಮವಸ್ತ್ರ ಹಾಗೂ ಅಗತ್ಯ ಪರಿಕರಗಳೊಂದಿಗೆ ಹಾಜರಿರಬೇಕು ಎಂದು ಸೂಚಿಸಿದರು.

ರಕ್ತದಾನ ಮಾಡಲು ಇಚ್ಛಿಸುವವರು ‘ಇ-ರಕ್ತಕೋಶ’ (e-RaktKosh) ಆ್ಯಪ್ ಅಥವಾ https://eraktakosh.mohfw.gov.in ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಂಡು ರಕ್ತದಾನ ಮಾಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ಮಾತನಾಡಿ, ಶಿಬಿರಗಳಿಗೆ ಅಗತ್ಯ ವಾಹನ ವ್ಯವಸ್ಥೆ ಹಾಗೂ ಔಷಧಿಗಳ ದಾಸ್ತಾನು ಮಾಡಿಕೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳು ಶಿಬಿರಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಬಳ್ಳಾರಿ ನಗರದ ನೂತನ ಜಿಲ್ಲಾಧಿಕಾರಿ ಕಚೇರಿ, ಎಸ್‌ಪಿ ಕಚೇರಿ, ಕೃಷಿ ಮಾರುಕಟ್ಟೆ, ಜಿಲ್ಲಾಸ್ಪತ್ರೆ, ಬಿಐಟಿಎಂ ಕಾಲೇಜು, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಿಎಂಸಿಆರ್‌ಸಿ, ಕೌಲ್‌ಬಜಾರ್, ಗಾಂಧಿನಗರದ ಸುವರ್ಣ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಕೆಪಿಟಿಸಿಎಲ್‌ನಲ್ಲಿ ರಕ್ತದಾನ ಶಿಬಿರಗಳು ನಡೆಯಲಿವೆ ಎಂದು ವಿವರಿಸಿದರು.

ಅದೇ ರೀತಿ ಸಿರುಗುಪ್ಪದ ಕಿಷ್ಕಿಂಧಾ ವಿಶ್ವವಿದ್ಯಾಲಯ ಹಾಗೂ ಬಸ್ ನಿಲ್ದಾಣ, ಸಂಡೂರಿನ ಎನ್‌ಎಂಡಿಸಿ, ಶ್ರೀ ಕುಮಾರಸ್ವಾಮಿ ದೇವಸ್ಥಾನ ಮತ್ತು ತೋರಣಗಲ್ಲಿನ ಸಂಜೀವಿನಿ ಆಸ್ಪತ್ರೆ, ಕುರುಗೋಡಿನ ಈಶ್ವರ್ ಪಾರ್ಕ್ ಹತ್ತಿರದ ಹಳೆಯ ಬಸ್ ನಿಲ್ದಾಣ ಹಾಗೂ ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ವೀರಕುಮಾರ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳಾದ ಡಾ. ವೀರೇಂದ್ರ ಕುಮಾರ, ಡಾ. ಮಂಜುಳ, ಆರ್‌ಎಂಒ ಡಾ. ಮಲ್ಲಿಕಾರ್ಜುನ, ತಾಲೂಕು ಆರೋಗ್ಯ ಅಧಿಕಾರಿಗಳು, ಸರ್ಕಾರಿ ಮತ್ತು ಖಾಸಗಿ ರಕ್ತಭಂಡಾರಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ