×
Ad

ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿ: ಶಾಸಕಿ ಅನ್ನಪೂರ್ಣ ತುಕಾರಾಂ

ಕುಡಿಯುವ ನೀರು, ಸ್ವಚ್ಛತೆ, ಉದ್ಯೋಗ ಖಾತರಿ ಹಾಗೂ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ

Update: 2026-07-14 22:47 IST

ಸಂಡೂರು/ಬಳ್ಳಾರಿ, ಜು.14: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ಮೂಲಸೌಕರ್ಯ ಹಾಗೂ ವಸತಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿಯ ಶ್ರೀ ಎಂ.ವೈ. ಘೋರ್ಪಡೆ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ 26 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಕುಡಿಯುವ ನೀರು, ಸ್ವಚ್ಛತೆ ಮತ್ತು KMERC ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) [VB-G RAM G] ಯೋಜನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ 26 ಗ್ರಾಮ ಪಂಚಾಯಿತಿಗಳಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಆಟೋ ಪ್ರಚಾರ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದರು.

ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗ, ದಿನಕ್ಕೆ 382 ರೂ. ಕೂಲಿ ದೊರೆಯಲಿದ್ದು, ಪೂರ್ಣಾವಧಿ ಕೆಲಸ ಮಾಡಿದ ಕುಟುಂಬವು 47,750 ರೂ. ಆದಾಯ ಗಳಿಸಬಹುದು ಎಂದು ತಿಳಿಸಿದರು.

ಯೋಜನೆಯಡಿ 318 ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು, ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ, ಜೀವನೋಪಾಯ ಅಭಿವೃದ್ಧಿ ಹಾಗೂ ಹವಾಮಾನ ಶಮನ ಕಾಮಗಾರಿಗಳು ಒಳಗೊಂಡಿವೆ. ಕೃಷಿ ಹಂಗಾಮಿನ ವೇಳೆ ಕಾರ್ಮಿಕರ ಲಭ್ಯತೆ ಕಾಪಾಡಲು 60 ದಿನಗಳ ವಿರಾಮ ವ್ಯವಸ್ಥೆಯೂ ಇದೆ ಎಂದು ಹೇಳಿದರು.

ಈ ವರ್ಷ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು, ಸಾರ್ವಜನಿಕ ಶೌಚಾಲಯಗಳು ಹಾಗೂ ಚರಂಡಿಗಳ ನಿರ್ವಹಣೆಗೆ ಗ್ರಾಮ ಪಂಚಾಯಿತಿಗಳು ವಿಶೇಷ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿ, ಸ್ವಚ್ಛ ಭಾರತ ಮಿಷನ್ (SBM), 15ನೇ ಹಣಕಾಸು ಆಯೋಗ ಹಾಗೂ VB-G RAM G ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದ ಅವರು, KMERC ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಾಗೂ ಮನೆ ಮಂಜೂರಾತಿಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ತಹಶೀಲ್ದಾರ್ ಅನಿಲ್‌ಕುಮಾರ್ ಜಿ., ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್, ಸಹಾಯಕ ನಿರ್ದೇಶಕರಾದ ವಸಂತರಾಜ್, ಮಹೇಶ್ ಕುಮಾರ್, ತಾಲೂಕು ಯೋಜನಾಧಿಕಾರಿ ಹನುಮನಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News