ಗ್ರಾಮೀಣ ಆರೋಗ್ಯ ಸೇವೆ ಬಲವರ್ಧನೆಗೆ ಆದ್ಯತೆ; ಒಂದು ಸಾವಿರ ವೈದ್ಯರ ನೇಮಕಾತಿಗೆ ಸಂಪುಟ ಒಪ್ಪಿಗೆ: ಸಚಿವ ಖಾದರ್
ಸಚಿವ ಯು.ಟಿ.ಖಾದರ್
ಬಳ್ಳಾರಿ: ಗ್ರಾಮೀಣ ಪ್ರದೇಶಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ, ವೈದ್ಯರು ಹಾಗೂ ಸಿಬ್ಬಂದಿ ನೇಮಕಾತಿ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದು ಸಾವಿರ ವೈದ್ಯರ ನೇಮಕಾತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನೇರ ನೇಮಕಾತಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಈಗಾಗಲೇ 250 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದ್ದು, ಜಿಲ್ಲೆಗಳ ಬೇಡಿಕೆಗೆ ಅನುಗುಣವಾಗಿ ಹೊರಗುತ್ತಿಗೆ ಆಧಾರದಲ್ಲಿಯೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಹೊಸದಾಗಿ 350 ಆಂಬ್ಯುಲೆನ್ಸ್‌ಗಳನ್ನು ಖರೀದಿಸಲಾಗುತ್ತಿದ್ದು, ಪ್ರಸ್ತುತ 450 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಭಾಗದ ಯಾವುದೇ ಹಳ್ಳಿಗೂ 20ರಿಂದ 25 ನಿಮಿಷಗಳೊಳಗೆ ಆಂಬ್ಯುಲೆನ್ಸ್ ತಲುಪಿಸುವ ಗುರಿ ಹೊಂದಲಾಗಿದೆ. ನಿಗದಿತ ಸಮಯಕ್ಕೆ ಆಂಬ್ಯುಲೆನ್ಸ್ ತಲುಪದಿದ್ದರೆ ಸಂಬಂಧಪಟ್ಟ ಜವಾಬ್ದಾರರಿಗೆ 3 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ಆಸ್ಪತ್ರೆಯಲ್ಲೂ ಕನಿಷ್ಠ ಐದು ಐಸಿಯು ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಸುಧಾರಣೆಗೂ ಆದ್ಯತೆ ನೀಡಲಾಗುತ್ತಿದೆ. ಮಹಿಳೆಯರ ಆರೋಗ್ಯ, ವಿಶೇಷವಾಗಿ ಹೆರಿಗೆ ಮತ್ತು ತಾಯಂದಿರ ಆರೋಗ್ಯದ ದೃಷ್ಟಿಯಿಂದ ಪ್ರತ್ಯೇಕ ವಿಭಾಗದೊಂದಿಗೆ ಮಹಿಳಾ ಆರೋಗ್ಯ ನೀತಿ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳು ಹೆಚ್ಚಾಗಿ ನಗರ ಪ್ರದೇಶಗಳಿಗೆ ಸೀಮಿತವಾಗಿರುವುದರಿಂದ ಗ್ರಾಮೀಣ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಖಾಸಗಿ ಏಜೆನ್ಸಿಗಳ ಮೂಲಕ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
108 ಆಂಬ್ಯುಲೆನ್ಸ್ ಸಿಬ್ಬಂದಿಯ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸಿಬ್ಬಂದಿಯಿಂದ ವಿವಿಧ ಬೇಡಿಕೆಗಳು ಸಲ್ಲಿಕೆಯಾಗುತ್ತಿವೆ. ಸರ್ಕಾರದ ಬಜೆಟ್ ಮಿತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಔಷಧಿಗಳ ಕೊರತೆಗೆ ಟೆಂಡರ್ ಪ್ರಕ್ರಿಯೆಯ ವಿಳಂಬ ಹಾಗೂ ತಾಂತ್ರಿಕ ಕಾರಣಗಳು ಕಾರಣವಾಗಿವೆ. ಅಗತ್ಯ ಔಷಧಿಗಳು ಲಭ್ಯವಿದ್ದು, ಕೆಲವು ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಅವಕಾಶ ನೀಡಲಾಗಿದೆ. ಮುಂದಿನ ಎರಡು ತಿಂಗಳೊಳಗೆ ಔಷಧಿಗಳ ಕೊರತೆ ಸೇರಿದಂತೆ ಆರೋಗ್ಯ ಇಲಾಖೆಯ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಖಾದರ್ ಭರವಸೆ ನೀಡಿದರು.