×
Ad

Sandur | ವಿವಿಧೆಡೆ ದಾಳಿ : ಇಬ್ಬರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

Update: 2026-06-26 23:20 IST

ಸಂಡೂರು: ತಾಲೂಕಿನ ಚೋರನೂರು ಹೋಬಳಿ ವ್ಯಾಪ್ತಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಗುರುವಾರ ಹಠಾತ್ ದಾಳಿ ನಡೆಸಿ, ಇಬ್ಬರು ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.

ಚೋರನೂರು ಹೋಬಳಿ ವ್ಯಾಪ್ತಿಯ ಸುಮಾರು 25 ಉದ್ದಿಮೆಗಳು ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಜಂಟಿಯಾಗಿ ದಾಳಿ ನಡೆಸಿದರು. ಈ ವೇಳೆ ಕಾನೂನುಬಾಹಿರವಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ, ಅವರನ್ನು ಕೆಲಸದಿಂದ ಮುಕ್ತಗೊಳಿಸಲಾಯಿತು.

ರಕ್ಷಿಸಲ್ಪಟ್ಟ ಮಕ್ಕಳನ್ನು ಅವರು ಈ ಹಿಂದೆ ವ್ಯಾಸಂಗ ಮಾಡುತ್ತಿದ್ದ ಶಾಲೆಗಳಿಗೆ ಮರು ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ವಯಸ್ಸಿನ ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು, ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಮಾಲೀಕರ ವಿರುದ್ಧ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಇದೇ ವೇಳೆ, ಅಂಗಡಿ ಹಾಗೂ ಉದ್ದಿಮೆಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದ್ದು, ಜಾಗೃತಿ ಪೋಸ್ಟರ್‌ಗಳನ್ನು ಹಂಚುವ ಮೂಲಕ ಅರಿವು ಮೂಡಿಸಲಾಯಿತು.

ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ (ಚೈಲ್ಡ್‌ಲೈನ್) ಸಹಯೋಗದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಸುಧಾ, ಸಂಡೂರಿನ ಕಾರ್ಮಿಕ ನಿರೀಕ್ಷಕ ಮಂಜುನಾಥ ತೊಂಡೆಹಾಳ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ. ಮೌನೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಚ್.ಎನ್. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುನೀತಾ, ಮಕ್ಕಳ ರಕ್ಷಣಾ ಘಟಕದ ಅರುಳ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಚಂದ್ರಕಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News