ಸಂಡೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಮಕ್ಕಳ ಹಕ್ಕುಗಳ ಗ್ರಾಮಸಭೆಗಳಲ್ಲಿ ಮಕ್ಕಳು ಮಂಡಿಸುವ ಸಮಸ್ಯೆ ಮತ್ತು ಬೇಡಿಕೆಗಳಿಗೆ ಅಧಿಕಾರಿಗಳು ಆದ್ಯತೆ ನೀಡಿ, ತ್ವರಿತವಾಗಿ ಪರಿಹರಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರೇಣುಕಾಚಾರ್ಯ ಸ್ವಾಮಿ ಸೂಚಿಸಿದರು.

ಪಟ್ಟಣದ ಎಂ.ವೈ. ಘೋರ್ಪಡೆ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಎಲ್ಲಾ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮಸಭೆ ಪರಿಣಾಮಕಾರಿ ಅನುಷ್ಠಾನ ಕುರಿತ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಬೇಡಿಕೆಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಈಡೇರಿಸಬೇಕು. ಕೈಗೊಂಡ ಕ್ರಮಗಳ ಬಗ್ಗೆ ನಿರಂತರ ನಿಗಾ ವಹಿಸುವ ಮೂಲಕ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಹಾಗೂ ಕುರುಗೋಡಿನ ಸಿಆರ್‌ಟಿ ಸಂಯೋಜಕ ಡಾ.ರಾಘವೇಂದ್ರ ಎಚ್.ಸಿ. ಮಾತನಾಡಿ, ಗ್ರಾಮಸಭೆಗೂ ಮುನ್ನ ವಿವಿಧ ಪಾಲುದಾರರೊಂದಿಗೆ ಪೂರ್ವಭಾವಿ ಸಭೆ ನಡೆಸಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳು (ಎಸ್‌ಡಿಜಿ) ಹಾಗೂ ಮಾನವ ಅಭಿವೃದ್ಧಿ ಸೂಚಕಗಳ ಅನ್ವಯ ಮಕ್ಕಳ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಪೋಕ್ಸೊ ಕಾಯ್ದೆ, ತಾಯಂದಿರ ಮತ್ತು ಶಿಶು ಮರಣ ತಡೆಯುವಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿವರಿಸಿದರು.

ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಹನುಮಪ್ಪ ನಾಯಕ್, ರೀಡ್ಸ್ ಸಂಸ್ಥೆಯ ಸಂಯೋಜಕ ತಿಪ್ಪೇಸ್ವಾಮಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor