ಸಂಡೂರು: ನಿರಂತರ ಜಾಗೃತಿ ಮತ್ತು ಪ್ರಯತ್ನಗಳ ಫಲವಾಗಿ ಬಾಲ್ಯವಿವಾಹಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಲ್ಯವಿವಾಹವನ್ನು ಸಂಪೂರ್ಣವಾಗಿ ಶೂನ್ಯಕ್ಕೆ ತರಬೇಕು. ಮಕ್ಕಳಿಗೆ ಸುರಕ್ಷಿತ ಶಿಕ್ಷಣ ಹಾಗೂ ಭದ್ರ ಭವಿಷ್ಯ ಕಲ್ಪಿಸುವುದು ಎಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಹೇಳಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಕ್ಸೋ ಕಾಯ್ದೆ–2012 ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಗಾಗಿ ಈಗಾಗಲೇ ಮಾರ್ಗದರ್ಶಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 2025–26ನೇ ಸಾಲಿನಲ್ಲಿ ಶಾಲಾ ಮಕ್ಕಳ ಸುರಕ್ಷತಾ ಸಮಿತಿಗಳ ರಚನೆ ಮತ್ತು ಅನುಪಾಲನೆ ಕುರಿತು ಎರಡು ದಿನಗಳ ತರಬೇತಿ ನೀಡಲಾಗಿದೆ. 2026–27ನೇ ಸಾಲಿನಲ್ಲಿಯೂ ವಿದ್ಯಾರ್ಥಿಗಳನ್ನು ಒಳಗೊಂಡು ಛತ್ರಪತಿ ಶಿವಾಜಿ ಉದ್ಯಾನವನದಲ್ಲಿ ಜಾಗೃತಿ ಅಭಿಯಾನ ನಡೆಸಲಾಗಿದೆ. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ತಾಲ್ಲೂಕಿನ 200ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಶಾಲೆಗಳಿಂದ ತಲಾ ಇಬ್ಬರು ಶಿಕ್ಷಕರಂತೆ 150ಕ್ಕೂ ಹೆಚ್ಚು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕಿ ಕೆ. ಸೀತಾ ಮಹಾಲಕ್ಷ್ಮಿ, ತಾಲ್ಲೂಕು ಸಂಯೋಜಕ ಕೆ.ಎಂ. ತಿಪ್ಪೇಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಗೌಸಿಯ, ಮಾಲತಿಬಾಯಿ, ಎಎಸ್‌ಐ ರವಿ ಕಟ್ಟಿಮನಿ, ಹಿರಿಯ ವಕೀಲರಾದ ಟಿ.ಎಂ. ಶಿವಕುಮಾರ್, ಎಂ. ಅಂಜಿನಿ, ವಕೀಲ ಕುಮಾರಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅರುಣ್ ಆನಂದ್ ಹಾಗೂ ಐಸಿಡಿಎಸ್ ಮೇಲ್ವಿಚಾರಕಿ ಲಕ್ಷ್ಮಿ ಕಂಕನವಾಡಿ ಅವರು ಪೋಕ್ಸೋ ಕಾಯ್ದೆಯ ಕಾನೂನು ಅಂಶಗಳು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಮತ್ತು ಮಕ್ಕಳ ರಕ್ಷಣೆಯ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ಹಾದಿಮನಿ ಕಾರ್ಯಾಗಾರ ನಿರ್ವಹಿಸಿದರು. ಭುಜಂಗನಗರ, ಬಂಡ್ರಿ, ತೋರಣಗಲ್ಲು ಹಾಗೂ ಲಕ್ಷ್ಮಿಪುರ ಕ್ಲಸ್ಟರ್‌ಗಳ ಸಿಆರ್‌ಪಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ