ಸಿರುಗುಪ್ಪ | ಹತ್ಯೆಯಾದ ಹನುಮಂತಪ್ಪ ಕುಟುಂಬವನ್ನು ಭೇಟಿ ಮಾಡಿದ ಅಧಿಕಾರಿಗಳ ತಂಡ: ಕುಟುಂಬಸ್ಥರಿಗೆ ಸಾಂತ್ವನ
ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ 13ನೇ ವಾರ್ಡ್ ನಿವಾಸಿ ಎಸ್. ಹನುಮಂತಪ್ಪ (37) ಅವರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ ಸೋಮವಾರ ಸಂಜೆ ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿತು.
ಬಳ್ಳಾರಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಮಾತನಾಡಿ, ಮೃತನ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಅರ್ಹ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲಾಗುವುದು. ಅಲ್ಲದೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಾಷು ಮಾತನಾಡಿ, ಇಲಾಖೆಯ ನಿಯಮಾನುಸಾರ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಈ ವೇಳೆ ಸಮುದಾಯದ ಮುಖಂಡ ನರೇಂದ್ರ ಸಿಂಹ ಮಾತನಾಡಿ, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸಬೇಕು. ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಮೃತನ ಪತ್ನಿಗೆ ಕಾಯಂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಉಪತಹಶೀಲ್ದಾರ್ ಸಿದ್ಧಾರ್ಥ ಕಾರಂಜಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಡ್ಡೇರು ಸಿದ್ದಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ತಾ.ಪಂ ಯೋಜನಾಧಿಕಾರಿ ರಮೇಶ್, ಪಿಎಸ್‌ಐ ರೇವಣಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ಶಿವರಾಜ್ ಇದ್ದರು.