Siruguppa | ಅಕ್ರಮ ಪಡಿತರ ಅಕ್ಕಿ ಸಾಗಾಟ: 8.5 ಕ್ವಿಂಟಲ್ ಅಕ್ಕಿ, ವಾಹನ ಜಪ್ತಿ
ಸಿರುಗುಪ್ಪ, ಜು.16: ತಾಲೂಕಿನ ಕುಡುದರಹಾಳ್ ಗ್ರಾಮದಿಂದ ಸಿಂದನೂರು ಕಡೆಗೆ ಇಬ್ರಾಹಿಂಪುರ ಮಾರ್ಗವಾಗಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 8.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಸಾಗಾಟಕ್ಕೆ ಬಳಸಲಾಗಿದ್ದ ಅಶೋಕ್ ಲೇಲ್ಯಾಂಡ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, 30ರಿಂದ 35 ಕೆ.ಜಿ. ತೂಕದ ಒಟ್ಟು 26 ಚೀಲಗಳಲ್ಲಿ ತುಂಬಿದ್ದ ಪಡಿತರ ಅಕ್ಕಿಯನ್ನು ಪತ್ತೆಹಚ್ಚಿದರು. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 27,200 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಕಿ ಸಾಗಾಟಕ್ಕೆ ಬಳಸಲಾಗಿದ್ದ ಕೆ.ಎ.02 ಎಬಿ 9605 ನೋಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಾಹನ ಚಾಲಕ ಅಯ್ಯಪ್ಪ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಿ ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶಗಳಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬೇರೆಡೆ ಸಾಗಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಗಾವನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.
ವಶಪಡಿಸಿಕೊಂಡ ಅಕ್ಕಿಯ ಮೂಲ, ಸಾಗಾಟದ ಉದ್ದೇಶ ಹಾಗೂ ಪ್ರಕರಣದ ಹಿಂದೆ ಇರುವವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಕ್ರಮ ಪಡಿತರ ಅಕ್ಕಿ ಸಾಗಾಟ ತಡೆಗೆ ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.