ಸಿರುಗುಪ್ಪ: ಕಾನೂನಿನಲ್ಲಿ ಜಾತಿವಾರು ಶಿಕ್ಷೆ ಎಂಬುದಿಲ್ಲ. ನಾವು ನೀಡುವ ರಕ್ತಕ್ಕೆ ಜಾತಿಯಿಲ್ಲದಿರುವಾಗ ನಮ್ಮ ನಡುವೆ ಜಾತಿ ವೈಷಮ್ಯವೇಕೆ? ಊರಿನಲ್ಲಿ ಎಲ್ಲರೂ ಸಹೋದರರಂತೆ ಬದುಕುವ ಮೂಲಕ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಬಳ್ಳಾರಿ ಉಪವಿಭಾಗಾಧಿಕಾರಿ ಎಚ್.ಡಿ.ರಾಜೇಶ್ ಮನವಿ ಮಾಡಿದರು.

ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಕಾನೂನಿನ ಕುಣಿಕೆಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕೃತ್ಯದಲ್ಲಿ ಭಾಗಿಯಾದವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಸಿದರು.

ಮುಖಂಡ ಯಜಮಾನರ ಮಾರೆಪ್ಪ ಮಾತನಾಡಿ, ಆಗಬಾರದ ಘಟನೆ ನಡೆದುಹೋಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಘಟನೆಯ ಬಳಿಕ ಭಯದಿಂದ ಊರು ತೊರೆದಿರುವ ಅಮಾಯಕ ಕುಟುಂಬಗಳನ್ನು ಮರಳಿ ಕರೆಸಿ, ಅವರು ನೆಮ್ಮದಿಯಿಂದ ಬದುಕಲು ಆಡಳಿತ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಮಾತನಾಡಿ, ಸಂತ್ರಸ್ತ ಕುಟುಂಬದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಕೊಡಿಸಲು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಾಷು, ತಹಶೀಲ್ದಾರ್ ಗೌಸಿಯಾ ಬೇಗಂ, ಸಿಪಿಐ ಚಂದನ್ ಗೋಪಾಲ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಡ್ಡೇರು ಸಿದ್ದಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ಪಿಎಸ್‌ಐ ರೇವಣಸಿದ್ದಪ್ಪ, ಕಂದಾಯ ನಿರೀಕ್ಷಕ ಗಣೇಶ, ಮುಖಂಡರಾದ ಬಿ.ಎಂ. ಸತೀಶ, ಎಂ.ಎಸ್. ಸಿದ್ದಪ್ಪ, ನರೇಂದ್ರ ಸಿಂಹ, ಎಚ್.ಕೆ. ತಿಮ್ಮಪ್ಪ, ಕೊಡ್ಲೆ ಮಲ್ಲಿಕಾರ್ಜುನ ಹಾಗೂ ಎರಡೂ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ